Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿನಯ್‌ ಕುಲಕರ್ಣಿಗೆ ಬಿಗ್ ರಿಲೀಫ್‌: ಧಾರವಾಡ ಪ್ರವೇಶಕ್ಕೆ ಕೋರ್ಟ್‌ ಅನುಮತಿ, ಷರತ್ತುಗಳೇನು?

---Advertisement---

ಧಾರವಾಡ: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅಮಾನತುಗೊಂಡು ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಕಾನೂನು ಪರಿಹಾರ ದೊರೆತಿದೆ. ಧಾರವಾಡ ಪ್ರವೇಶಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು. ವಿಚಾರಣೆ ಬಳಿಕ ನ್ಯಾಯಾಲಯ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಕೋರ್ಟ್‌ ವಿಧಿಸಿದ ಷರತ್ತುಗಳೇನು?
ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿರುವ ನ್ಯಾಯಾಲಯ ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸುವಂತಿಲ್ಲ. ಸಾಕ್ಷಿಗಳಿಗೆ ಬೆದರಿಕೆ ಹಾಕುವುದು ಅಥವಾ ಅವರ ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರುವ ಪ್ರಯತ್ನ ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ.
ಅಲ್ಲದೆ, ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸುವ ಸಂದರ್ಭದಲ್ಲಿ ಬೆಂಬಲಿಗರಿಂದ ಮೆರವಣಿಗೆ, ರ್ಯಾಲಿ ಅಥವಾ ಸಾರ್ವಜನಿಕ ಸಭೆಗಳನ್ನು ಆಯೋಜಿಸಬಾರದು ಎಂದು ಕೋರ್ಟ್‌ ತಿಳಿಸಿದೆ.ಸಾರ್ವಜನಿಕ ಶಾಂತಿ, ಸಂಚಾರ ಹಾಗೂ ಜನಜೀವನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಈ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸುವಂತೆ ಕೋರಿ ಪ್ರಾಸಿಕ್ಯೂಷನ್‌ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅಮಾನತುಗೊಂಡ ಬಳಿಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯದ ಆದೇಶದ ಪ್ರತಿ ವಿಧಾನಸಭೆ ಸಚಿವಾಲಯಕ್ಕೆ ಸಲ್ಲಿಕೆಯಾದ ನಂತರ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಮರುಸ್ಥಾಪನೆಯಾಗಿದೆ. ಹೀಗಾಗಿ ಅವರು ಶಾಸಕರಾಗಿ ಮುಂದುವರಿದಿದ್ದಾರೆ.ಧಾರವಾಡ ಪ್ರವೇಶಕ್ಕೂ ಇದೀಗ ನ್ಯಾಯಾಲಯ ಅನುಮತಿ ನೀಡಿರುವುದು ವಿನಯ್ ಕುಲಕರ್ಣಿ ಹಾಗೂ ಅವರ ಬೆಂಬಲಿಗರಿಗೆ ಮತ್ತಷ್ಟು ನಿರಾಳತೆ ತಂದಿದೆ.

2016ರಲ್ಲಿ ನಡೆದ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯವು 2026ರ ಏಪ್ರಿಲ್‌ 15ರಂದು ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಬಳಿಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ಧಾರವಾಡ ಪ್ರವೇಶಕ್ಕೂ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now