ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 29 : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗೆ 20 ಕೋಟಿ ವಿಶೇಷ ಅನುದಾನ ಮಂಜೂರು ಮಾಡಬೇಕೆಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಸಚಿವ ಸಚಿವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ರವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.
2026ರ ಏಪ್ರಿಲ್ 30 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, 2026-27 ಹಾಗೂ 2027-28ನೇ ಸಾಲುಗಳಿಗೆ ರಾಜ್ಯದ ಅಲ್ಪಸಂಖ್ಯಾತರ ಕಾಲೊನಿಗಳು ಹಾಗೂ ಅತಿಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ 600 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತರು ವಾಸಿಸುವ ವಿವಿಧ ಕಾಲೊನಿಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿದೀಪ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ಅಗತ್ಯವಾಗಿವೆ. ಆದ್ದರಿಂದ, ಸಚಿವ ಸಂಪುಟವು ಅನುಮೋದಿಸಿರುವ 600 ಕೋಟಿ ವಿಶೇಷ ಕ್ರಿಯಾ ಯೋಜನೆಯಡಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತರ ಕಾಲೊನಿಗಳ ಸಮಗ್ರ ಅಭಿವೃದ್ಧಿಗಾಗಿ 20 ಕೋಟಿ ವಿಶೇಷ ಅನುದಾನವನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಲಾಗಿದೆ.
ಈ ಅನುದಾನ ದೊರೆತಲ್ಲಿ ಕ್ಷೇತ್ರದ ಅಲ್ಪಸಂಖ್ಯಾತರ ಕಾಲೊನಿಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಜನರ ಜೀವನಮಟ್ಟ ಸುಧಾರಿಸಲು ಹಾಗೂ ಹಿಂದುಳಿದ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗುತ್ತದೆ. ಆದ್ದರಿಂದ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ 20 ಕೋಟಿ ವಿಶೇಷ ಅನುದಾನವನ್ನು ಆದ್ಯತೆಯ ಮೇರೆಗೆ ಮಂಜೂರು ಮಾಡಿ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಇಲಾಖೆ ಸಚಿವರಾದ ಯು.ಟಿ. ಖಾದರ್ ರವರಿಗೆ ಪತ್ರದ ಮೂಲಕ ಮನವಿ ಸಲಿಸಿದ್ದಾರೆ.













