Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಶೀಘ್ರವೇ 3,000 ಸಹಾಯಕ ಪ್ರಾಧ್ಯಾಪಕ, 320 ಪ್ರಾಂಶುಪಾಲರ ನೇಮಕ : ಸಚಿವ ಬಸವರಾಜ ರಾಯರೆಡ್ಡಿ

---Advertisement---

ಕೊಪ್ಪಳ.ಸೆಪ್ಟೆಂಬರ್.01: ಬರ ಪರಿಹಾರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಉನ್ನತ ಶಿಕ್ಷಣ ಸುಧಾರಣೆಗೆ ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.

ಕೊಪ್ಪಳ ಜಿಲ್ಲಾಡಳಿತ ಹಾಗೂ ಯಲಬುರ್ಗಾ ಪಟ್ಟಣ ಪಂಚಾಯತ್ ವತಿಯಿಂದ ಪಟ್ಟಣದ ಬಯಲು ರಂಗಮಂದಿರದಲ್ಲಿ ಆಗಸ್ಟ್ 30ರಂದು ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಮತ್ತು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ. ಮುಂಬರುವ ದಿನಗಳಲ್ಲಿ ಕೇಂದ್ರದ ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ಯಲಬುರ್ಗಾ, ಕುಷ್ಟಗಿ, ಕೊಪ್ಪಳ, ಕಾರಟಗಿ ಸೇರಿದಂತೆ ಸುಮಾರು 78 ರಿಂದ 80 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿ ರೈತರಿಗೆ ಅಗತ್ಯ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳು ಮತ್ತು ಸಾಮಾಜಿಕ ಭದ್ರತಾ ಪಿಂಚಣಿಗಳು ನಿರಂತರವಾಗಿ ಜನರಿಗೆ ತಲುಪುತ್ತಿವೆ. ಸಬ್ಸಿಡಿ ಹಾಗೂ ನೇರ ಸೌಲಭ್ಯಗಳಿಗಾಗಿ ಸರ್ಕಾರ ಲಕ್ಷಾಂತರ ಕೋಟಿ ರೂ. ವೆಚ್ಚ ಮಾಡುತ್ತಿದೆ ಎಂದರು.

ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮುಂದಿನ ಎರಡು ತಿಂಗಳಲ್ಲಿ 3,000 ಸಹಾಯಕ ಪ್ರಾಧ್ಯಾಪಕರನ್ನು ಹಾಗೂ ಸೆಪ್ಟೆಂಬರ್ 5ರೊಳಗೆ 320 ಪ್ರಾಂಶುಪಾಲರನ್ನು ಸಂಪೂರ್ಣ ಪಾರದರ್ಶಕವಾಗಿ ಮೆರಿಟ್ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ರಾಜ್ಯದಲ್ಲಿ ಸುಮಾರು 249 ನಕಲಿ ಪಿಎಚ್‌ಡಿ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, ಇಂತಹ ನಕಲಿ ಪ್ರಮಾಣಪತ್ರ ಹೊಂದಿದವರ ವಿರುದ್ಧ ಕ್ರಿಮಿನಲ್ ಕೇಸ್ ಮತ್ತು ಚೀಟಿಂಗ್ ಕೇಸ್ ದಾಖಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇದಲ್ಲದೆ ಬೆಂಗಳೂರಿನಲ್ಲಿ ಐಐಟಿ ಮಾದರಿಯ ವಿಶ್ವವಿದ್ಯಾಲಯ ಸ್ಥಾಪನೆ, ಎಐ ವಿಶ್ವವಿದ್ಯಾಲಯ ಹಾಗೂ ಜಾಗತಿಕ ಮಟ್ಟದ ಶಿಕ್ಷಣ ಸಂಸ್ಥೆಗಳನ್ನು ಆಕರ್ಷಿಸಲು ‘ಗ್ಲೋಬಲ್ ಎಜುಕೇಶನ್ ಸಮ್ಮಿಟ್’ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

*ಕ್ಷೇತ್ರ ಪ್ರವಾಸ:* ಯಲಬುರ್ಗಾ ಮತ್ತು ಕುಕನೂರು ತಾಲೂಕಿನ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಬಗೆಹರಿಸಲು ಮುಂದಿನ 10 ದಿನಗಳಲ್ಲಿ ಯಲಬುರ್ಗಾ ಕ್ಷೇತ್ರದ ಒಟ್ಟು 36 ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ‘ಜನಸಂಪರ್ಕ ಸಭೆ’ಗಳನ್ನು ನಡೆಸಲಾಗುವುದು ಎಂದು ಬಸವರಾಜ ರಾಯರಡ್ಡಿ ಅವರು ತಿಳಿಸಿದರು.

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ಕೊರತೆಯಿಲ್ಲ ಎಂಬುದಕ್ಕೆ ಯಲಬುರ್ಗಾದಲ್ಲಿ ರೂ. 31 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೇ ಸಾಕ್ಷಿಯಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಿದೆ ಎಂದು ವಿರೋಧ ಪಕ್ಷದವರು ಟೀಕಿಸುತ್ತಾರೆ. ಖಜಾನೆ ಖಾಲಿಯಾಗಿದ್ದರೆ ಇಷ್ಟೊಂದು ದೊಡ್ಡ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಜನರಿಂದ ಸಂಗ್ರಹಿಸಿದ ತೆರಿಗೆ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಮತ್ತೆ ಜನಸಾಮಾನ್ಯರಿಗೆ ತಲುಪಿಸಿ ಅವರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಾಗುತ್ತಿದೆ ಎಂದರು.

Join WhatsApp

Join Now

Join Telegram

Join Now