Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಗ್ರಾಮೀಣ ಪ್ರದೇಶಗಳು ಸಮಗ್ರವಾಗಿ ಅಭಿವೃದ್ಧಿಯಾದಾಗ ಮಾತ್ರ ದೇಶದ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬ ಪರಿಕಲ್ಪನೆಯೊಂದಿಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ತಿಳಿಸಿದರು.

ತಾಲೂಕಿನ ಸೊಂಡೆಕೊಳ, ಗೊಡಬನಹಾಳು, ಕೆ.ಬಳಕಟ್ಟೆ ಬಳಿಯ ಕುಂಬಾರಪೀಠ ಹಾಗೂ ಗುಡ್ಡರಂಗನಹಳ್ಳಿಗಳಲ್ಲಿ ಒಟ್ಟು 2 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಮಂಗಳವಾರ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣದಂತಹ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮಹತ್ತರ ಜವಾಬ್ದಾರಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲಿದೆ. ಈ ಜವಾಬ್ದಾರಿಯನ್ನು ಅರಿತು ಜನರ ನಿರೀಕ್ಷೆಗಳಿಗೆ ತಕ್ಕಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಈಗಾಗಲೇ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದ್ದು, ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ. ಪ್ರತಿಯೊಂದು ಗ್ರಾಮಕ್ಕೂ ಅಗತ್ಯವಿರುವ ಸೌಲಭ್ಯಗಳನ್ನು ಗುರುತಿಸಿ ಆದ್ಯತೆಯ ಮೇರೆಗೆ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮಗಳ ಅಭಿವೃದ್ಧಿಗೆ ಉತ್ತಮ ರಸ್ತೆ ಸಂಪರ್ಕ ಅತ್ಯಂತ ಅವಶ್ಯಕವಾಗಿದೆ. ಮಳೆಗಾಲದಲ್ಲಿ ಹಾಗೂ ಇತರೆ ಸಂದರ್ಭಗಳಲ್ಲಿ ಗ್ರಾಮಸ್ಥರಿಗೆ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯವಿರುವ ಕಡೆಗಳಲ್ಲಿ ಸಿಸಿ ರಸ್ತೆಗಳನ್ನು ನಿರ್ಮಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಅದೇ ರೀತಿ ಮಳೆ ನೀರು ಮತ್ತು ಕೊಳಚೆ ನೀರು ಸಮರ್ಪಕವಾಗಿ ಹರಿದು ಹೋಗುವಂತೆ ಸಿಮೆಂಟ್ ಚರಂಡಿ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯವಿರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಯೋಜನೆಗಳು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿಯೊಬ್ಬ ನಾಗರಿಕನಿಗೂ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ದೊರೆಯಬೇಕು ಎಂಬುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ, ಶಾಲಾ ಕಟ್ಟಡಗಳ ಅಭಿವೃದ್ಧಿ, ಆರೋಗ್ಯ ಸೇವೆಗಳ ಸುಧಾರಣೆ, ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ಸಾರ್ವಜನಿಕರ ಜೀವನಮಟ್ಟವನ್ನು ಉತ್ತಮಪಡಿಸುವ ಅನೇಕ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಜನಪ್ರತಿನಿಧಿಯ ನಿಜವಾದ ಕರ್ತವ್ಯವಾಗಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಜನರ ಬಳಿಗೆ ಹೋಗದೆ, ಸದಾ ಜನರೊಂದಿಗೆ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಜನರು ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಹಾಗೂ ಕ್ಷೇತ್ರದ ಜನರ ಋಣ ತೀರಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುವ ಸಂಕಲ್ಪ ಮಾಡಿದ್ದೇನೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.

ಸೊಂಡೆಕೊಳ, ಗುಡಮ್ನಾಳ್, ರಾಷ್ಟ್ರೀಯ ಹೆದ್ದಾರಿ ನಾಲ್ಕರ ರಸ್ತೆ ಪಕ್ಕದಲ್ಲಿರುವ ಕುಂಬಾರಪೀಠ ಮತ್ತು ಗುಡ್ಡದ ರಂಗವನಹಳ್ಳಿ ಗ್ರಾಮಗಳಲ್ಲಿ ಒಟ್ಟು 2 ಕೋಟಿ ವೆಚ್ಚದ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.

ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷ ಶಿವಣ್ಣ ಮಾತನಾಡಿ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಸಾರ್ವಜನಿಕರ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಗ್ರಾಮಸ್ಥರು ಸಹ ಕಾಮಗಾರಿಗಳ ಬಗ್ಗೆ ಗಮನಹರಿಸಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯರಾದ ನಾಗರಾಜ್, ಜಿ ಆರ್ ಹಳ್ಳಿ ಪಿಡಿಒ ಆನಂದ್, ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಮಾಲ್ತೇಶ್ ಮುದ್ದಾಜಿ, ಮುಖಂಡರಾದ ಪ್ರಶಾಂತ್ ಪ್ರದೀಪ್ ರಮೇಶ್ ಕಲ್ಲೇಶ್ ಸಂತೋಷ್ ಚಂದ್ರಶೇಖರ್ ಕಲ್ಲಪ್ಪ ತಿಪ್ಪೇಸ್ವಾಮಿ ಓಬಳೇಶ್ ರಾಮಚಂದ್ರಪ್ಪ ಮಂಜಣ್ಣ ಜಯಣ್ಣ ರಾಮಣ್ಣ ಹಾಗೂ ಇತರರು ಇದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now