Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

​ಸೆ.6ಕ್ಕೆ ಸಶಸ್ತ್ರ ಕಾನ್‌ಸ್ಟೇಬಲ್ ಪರೀಕ್ಷೆ: ಚಿತ್ರದುರ್ಗದಲ್ಲಿ ಸಕಲ ಸಿದ್ಧತೆ, ಕಟ್ಟುನಿಟ್ಟಿನ ನಿಯಮ ಜಾರಿ

---Advertisement---

ಚಿತ್ರದುರ್ಗ.04: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಸೆಪ್ಟೆಂಬರ್ 6ರಂದು ನಡೆಯಲಿರುವ ಸಶಸ್ತ್ರ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಕಟ್ಟುನಿಟ್ಟಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ನಿರ್ಲಕ್ಷ್ಯ ವಹಿಸಿದರೆ ಹೊಸ ತಿದ್ದುಪಡಿ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಸರ್ಕಾರ ಹಾಗೂ ಕೆಇಎ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಪರೀಕ್ಷಾ ಪೇಪರ್ ಲೀಕ್ ಮಾಡುವುದು ಅಥವಾ ಸಣ್ಣ ಮಟ್ಟದ ಅಕ್ರಮದಲ್ಲಿ ಭಾಗಿಯಾಗುವುದು ಕೂಡ ಗಂಭೀರ ಅಪರಾಧವಾಗಿದ್ದು, ಪ್ರತಿಯೊಬ್ಬರಿಗೂ ವಹಿಸಲಾದ ಜವಾಬ್ದಾರಿಯನ್ನು ಜಾಗರೂಕತೆಯಿಂದ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಚಿತ್ರದುರ್ಗ ನಗರದ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 1824 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕುಡಿಯುವ ನೀರು, ಗಾಳಿ, ಬೆಳಕು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಸೆ.6 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ಜಾಗೃತ ದಳ, ವೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ತಮ್ಮ ಕರ್ತವ್ಯಗಳನ್ನು ಸ್ಪಷ್ಟವಾಗಿ ಅರಿತು ಕಾರ್ಯನಿರ್ವಹಿಸಬೇಕು. ಅಭ್ಯರ್ಥಿಗಳ ತಪಾಸಣೆಯನ್ನು ಅತ್ಯಂತ ಶಿಸ್ತಿನಿಂದ ನಡೆಸಬೇಕು ಎಂದರು.

ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಪರೀಕ್ಷಾ ಸಾಮಗ್ರಿಗಳನ್ನು ಸಾಗಿಸಲು ನಿಗದಿತ ಪ್ರತ್ಯೇಕ ವಾಹನಗಳು ಹಾಗೂ ಪೊಲೀಸ್ ರಕ್ಷಣೆ ನೀಡಬೇಕು. ಪರೀಕ್ಷೆ ನಂತರ ಉತ್ತರ ಪತ್ರಿಕೆಗಳನ್ನು ನಿಗದಿತ ನಿಯಮಾವಳಿಗಳಂತೆ ಪಡೆದುಕೊಂಡು, ಸುರಕ್ಷಿತವಾಗಿ ಖಜಾನೆಗೆ ರವಾನಿಸಬೇಕು.ಪರೀಕ್ಷಾ ಕಾರ್ಯದಲ್ಲಿ ನಿರತರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈಗಾಗಲೇ ಸೂಕ್ತ ತರಬೇತಿ ನೀಡಲಾಗಿದ್ದು, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳಿಗೆ ಬೆಸ್ಕಾಂ ತಡೆರಹಿತ ವಿದ್ಯುತ್ ಪೂರೈಕೆ ಕ್ರಮಕೈಗೊಳ್ಳಲು ನಿರ್ದೇಶನ ನೀಡಿದರು. ಪರೀಕ್ಷಾ ದಿನದಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳು ಹಾಗೂ ಅಪರ ಜಿಲ್ಲಾಧಿಕಾರಿಗಳು ಒಳಗೊಂಡಂತೆ ತಂಡಗಳು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದು ತಿಳಿಸಿದರು.

ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ: 

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು.

ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಸಭೆಯಲ್ಲಿ ಪಿ.ಯು.ಉಪನಿರ್ದೇಶಕ ಅಶೋಕ್.ಎನ್. ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಎ.ಸಿ.ಸುನೀಲ್‍ಕುಮಾರ್, ಖಜಾನಾಧಿಕಾರಿ ಅಶೋಕ್.ಹೆಚ್.ಟಿ ಸೇರಿದಂತೆ ಜಾಗೃತ ದಳದ, ವೀಕ್ಷಕರು, ವಸ್ತ್ರಸಂಹಿತೆ ಹಾಗೂ ಮಾರ್ಗಾಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now