Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ನನ್ನನ್ನು ನಾಡಿನ ದೊರೆ ಎನ್ನಬೇಡಿ, ಪ್ರಜಾಸೇವಕ ಎನ್ನಿ’: ಸಿಎಂ ಡಿ.ಕೆ ಶಿವಕುಮಾರ್

---Advertisement---

ವಿಜಯನಗರ.ಸೆಪ್ಟೆಂಬರ್.05 : ‘ನನ್ನನ್ನು ನಾಡಿನ ದೊರೆ ಎನ್ನಬೇಡಿ, ಪ್ರಜಾಸೇವಕ ಎನ್ನಿ’ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಇಂದು ಆಯೋಜಿಸಲಾಗಿದ್ದ ನೂತನ ‘ಪ್ರಜಾಸೇವಾ ಇಲಾಖೆ’ಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ನಮ್ಮ ದೇಶದಲ್ಲಿ ಪ್ರಭುಗಳ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ, ನನ್ನನ್ನು ‘ನಾಡಿನ ದೊರೆ’ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ನನಗೆ ಅತೀವ ಸಂತೋಷವಾಗುತ್ತದೆ.ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳು ಹಾಗೂ ಅಧಿಕಾರಿಗಳ ಬಳಿ ಅಲೆಯುವ ಕಾಲ ಈಗ ಮುಗಿದಿದೆ. ಸರ್ಕಾರದ ಆಡಳಿತವೇ ನೇರವಾಗಿ ಜನರ ಮನೆಬಾಗಿಲಿಗೆ ತಲುಪಬೇಕು ಎನ್ನುವ ಪವಿತ್ರ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧ, ಡಿಸಿ ಕಚೇರಿ ಅಥವಾ ತಾಲೂಕು ಕಚೇರಿಗಳಲ್ಲಿ ಕುಳಿತು ಜನರಿಂದ ದೂರವಿದ್ದು ಆಡಳಿತ ನಡೆಸುವುದು ಸರಿಯಲ್ಲ. ಪ್ರತಿಯೊಬ್ಬ ನಾಗರಿಕನಿಗೂ ಸಚಿವರು, ಶಾಸಕರು ಅಥವಾ ಅಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ನೇರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಇಲಾಖೆ ಕಾರ್ಯನಿರ್ವಹಿಸಲಿದೆ. ಇದು ಕೇವಲ ಒಂದು ಸರ್ಕಾರಿ ಇಲಾಖೆಯಾಗದೆ, ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಜನಪರ ವ್ಯವಸ್ಥೆಯಾಗಿ ಹೊರಹೊಮ್ಮಲಿದೆ.

ಜನಸಾಮಾನ್ಯರು ಶಾಸಕರು, ಮಂತ್ರಿಗಳು ಅಥವಾ ತಾಲೂಕು ಅಧಿಕಾರಿಗಳನ್ನು ಹುಡುಕಿಕೊಂಡು ಬರುವುದು ತಪ್ಪಬೇಕು. ಅಧಿಕಾರಿಗಳೇ ನೇರವಾಗಿ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಆಲಿಸಿ ಬಗೆಹರಿಸಬೇಕು ಎಂಬ ಉದ್ದೇಶದಿಂದ ಪ್ರಜಾಸೇವಾ ಇಲಾಖೆಯನ್ನು ಸೃಜಿಸಲಾಗಿದ್ದು, ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬುದು ಈ ಅಭಿಯಾನದ ಆಶಯವಾಗಿದೆ.

ಯಾವುದೇ ರಾಜಕೀಯ, ಧರ್ಮ-ಜಾತಿ ಇಲ್ಲದೆ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿಯೂ ಈ ಪ್ರಜಾಸೇವಾ ವ್ಯವಸ್ಥೆ ಅನುಷ್ಠಾನಗೊಳ್ಳಲಿದೆ. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರದಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಮಧ್ಯದಲ್ಲಿದ್ದು ಕೆಲಸ ಮಾಡಬೇಕು ಎಂದು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವರು ತಾಲೂಕು, ಹೋಬಳಿ ಮಟ್ಟದಲ್ಲಿ ಹಾಗೂ ಶಾಸಕರು ಪಂಚಾಯಿತಿ ಮಟ್ಟದಲ್ಲಿ ಈ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ.

ಶಾಸಕರು ಉಪಸ್ಥಿತರಿಲ್ಲದಿದ್ದರೆ ಅಧಿಕಾರಿಗಳೇ ಖುದ್ದಾಗಿ ಪಂಚಾಯಿತಿ ಕೇಂದ್ರಗಳಿಗೆ ತೆರಳಿ, ಸಣ್ಣ ಸಭೆಗಳನ್ನು ನಡೆಸಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಬೇಕು.

ಸಾರ್ವಜನಿಕರ ಅರ್ಜಿಗಳಿಗೆ ಕೇವಲ ಸ್ವೀಕೃತಿ ನೀಡುವುದು ಮುಖ್ಯವಲ್ಲ; ಅವರಿಗೆ ಸೂಕ್ತ ಪರಿಹಾರ ತಲುಪಿದಾಗ ಮಾತ್ರ ಯೋಜನೆಯ ನೈಜ ಯಶಸ್ಸು ಸಾಧ್ಯ.

ವಿಜಯನಗರದ ಪವಿತ್ರ ಭೂಮಿಯಲ್ಲಿ ಈ ಜನಪರ ಯೋಜನೆಗೆ ಚಾಲನೆ ನೀಡಲಾಗಿದೆ. ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ. ತಿಂಗಳಿಗೆ ಎರಡು ದಿನ ಅಧಿಕಾರಿಗಳು ಸ್ಥಳಕ್ಕೇ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಪಿಂಚಣಿ, ಭೂಮಿ ವ್ಯಾಜ್ಯ, ಸರ್ಕಾರದ ಸೌಲಭ್ಯಗಳು, ಖಾತೆ ಬದಲಾವಣೆ, ಗ್ಯಾರಂಟಿ ಯೋಜನೆಗಳು ಹಾಗೂ ಮನೆ-ನಿವೇಶನಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು. ಬಡವರು ಹಾಗೂ ಶೋಷಿತರಿಗೆ ತಹಶೀಲ್ದಾರ್, ಎಸಿ ಅಥವಾ ಡಿಸಿ ಮಟ್ಟದ ವ್ಯಾಜ್ಯಗಳಲ್ಲಿ ಹೋರಾಡಲು ಉಚಿತವಾಗಿ ವಕೀಲರ ಸೇವೆ ಒದಗಿಸಿ ಕಾನೂನು ನೆರವು ನೀಡಲಾಗುವುದು. ಅರ್ಜಿ ತಿರಸ್ಕೃತಗೊಂಡರೆ ಅದಕ್ಕೆ ಕಾರಣವನ್ನು ಸ್ಪಷ್ಟಪಡಿಸಲಾಗುವುದು. ಅರ್ಜಿದಾರರಿಗೆ ಸಂಪೂರ್ಣ ಪರಿಹಾರ ಸಿಗುವವರೆಗೂ ಸರ್ಕಾರ ಅವರ ಬೆನ್ನಿಗೆ ನಿಲ್ಲಲಿದೆ.

ಸಮಾಜದ ಪ್ರತಿಯೊಂದು ವರ್ಗಕ್ಕೂ ಅಂಬೇಡ್ಕರ್ ಅವರ ಚಿಂತನೆಯಂತೆ ಸಮಾನ ಗೌರವ ಸಿಗಬೇಕು ಎಂಬುದು ಸರ್ಕಾರದ ಆಶಯ. ಸರ್ಕಾರ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ವಿರೋಧ ಪಕ್ಷಗಳಿಗೆ ಅದನ್ನು ಕಾರ್ಯರೂಪಕ್ಕೆ ತಂದು ತೋರಿಸಿದ್ದೇವೆ. ಪ್ರಜಾಸೇವಾ ಯೋಜನೆಯೂ ಇಡೀ ದೇಶಕ್ಕೆ ಮಾದರಿಯಾಗಲಿದೆ ಎಂದರು.

Join WhatsApp

Join Now

Join Telegram

Join Now