ಚಿತ್ರದುರ್ಗ. ಸೆ.05: ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಜತೆಗೆ ಉತ್ತಮ ನಾಗರಿಕರನ್ನು ರೂಪಿಸುವ ಮೂಲಕ ಸಮಾಜದ ಭವಿಷ್ಯ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆ, ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನೋತ್ಸವ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಶ್ರಮ, ತ್ಯಾಗ ಹಾಗೂ ಬದ್ಧತೆಯಿಂದ ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು, ಸಂಸ್ಕಾರ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಿಸಿದಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದರು.
ಗುರು ಸ್ಥಾನ ಅತ್ಯುನ್ನತವಾದದ್ದು. ಮಕ್ಕಳ ಭವಿಷ್ಯದ ಬುನಾದಿಯನ್ನು ಭದ್ರವಾಗಿ ನಿರ್ಮಿಸುವ ಶಕ್ತಿ ಶಿಕ್ಷಕರಲ್ಲಿದೆ. ಬದಲಾಗುತ್ತಿರುವ ಆಧುನಿಕ ಕಾಲಘಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲೂ ತಂತ್ರಜ್ಞಾನದ ಸವಾಲುಗಳು ಎದುರಾಗುತ್ತಿದ್ದು, ಶಿಕ್ಷಕರು ಸಹ ಕಾಲಕ್ಕೆ ತಕ್ಕಂತೆ ಅಪ್ಡೇಟ್ ಆಗುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷಕ ವೃತ್ತಿಯು ಸಮಾಜದ ಋಣವನ್ನು ತೀರಿಸುವ ಅತ್ಯಂತ ಜವಾಬ್ದಾರಿಯುತ ಹಾಗೂ ಪುಣ್ಯದ ಕೆಲಸವಾಗಿದ್ದು, ಪ್ರತಿಯೊಬ್ಬ ಶಿಕ್ಷಕನೂ ತನ್ನ ವೃತ್ತಿಗೆ ಆತ್ಮಸಾಕ್ಷಿಯಾಗಿ ನ್ಯಾಯ ಒದಗಿಸಬೇಕು. ಶಿಕ್ಷಕರಾದವರು ದೇಶದ ಅತ್ಯುನ್ನತ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಹುದ್ದೆಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ. ಅವರ ಇಚ್ಛಾಶಕ್ತಿ, ಜಾಣ್ಮೆ ಮತ್ತು ವ್ಯಕ್ತಿತ್ವ ನಮಗೆಲ್ಲರಿಗೂ ಮಾದರಿಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ.ಕಾರಜೋಳ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ.ಮಹಂತೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್.ಶಿವಣ್ಣ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಡಯಟ್ ಪ್ರಾಂಶುಪಾಲ ಎಸ್.ನಾಗಭೂಷಣ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗಿರಿಜ, ಕ್ಷೇತ್ರ ಸಮನ್ವಯಾಧಿಕಾರಿ ಇ.ಸಂಪತ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಎಲ್ಲ ಸಂಘಗಳ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ನಿರ್ದೇಶಕರು, ಶಿಕ್ಷಕರು ಇದ್ದರು.










