ಬೆಂಗಳೂರು.ಸೆಪ್ಟೆಂಬರ್.10: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರ 100 ದಿನಗಳ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, ಇಂದು (ಸೆಪ್ಟೆಂಬರ್ 10, ಗುರುವಾರ) ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ‘ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಲಿರುವ ಈ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಸಂಪುಟದ ಎಲ್ಲಾ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಸರ್ಕಾರದ ಪ್ರಮುಖ ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರೈತರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರೊಂದಿಗೆ ಮುಖ್ಯಮಂತ್ರಿಗಳು ನೇರವಾಗಿ ಸಂವಾದ ನಡೆಸಲಿದ್ದು, ಯೋಜನೆಗಳು ಸೃಷ್ಟಿಸಿರುವ ಸಾಮಾಜಿಕ-ಆರ್ಥಿಕ ಬದಲಾವಣೆಗಳು ಮತ್ತು ಮುಂದಿನ ಅಭಿವೃದ್ಧಿ ಹೆಜ್ಜೆಗಳ ಕುರಿತು ಚರ್ಚಿಸಲಿದ್ದಾರೆ.










