ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರ ನೇತೃತ್ವದ ಸಮಿತಿ ಮಧ್ಯಂತರ ವರದಿ ನೀಡಿದ್ದು, ಈ ವರದಿಯಲ್ಲಿನ ಶಿಫಾರಸುಗಳ ಕುರಿತು ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಶ್ರೀ ರಾಮೋಜಿಗೌಡ, ಶಾಸಕರಾದ ಬಿ. ಶಿವಣ್ಣ, ಕಾಮ್ಸ್ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆಯ ಡಿಡಿಪಿಐ ಜಯಪ್ರಕಾಶ್ ಹಾಗೂ ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.











