Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’; ಪ್ರಜಾ ಸೇವಾ ಆಂದೋಲನಕ್ಕೆ ಕೆ.ಸಿ ವೀರೇಂದ್ರ ಪಪ್ಪಿ ಕರೆ

---Advertisement---

 

ಚಿತ್ರದುರ್ಗ ಸೆ,12: ಗ್ರಾಮೀಣ ಪ್ರದೇಶದ ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ವಿವಿಧ ಇಲಾಖೆಗಳ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ರೂಪಿಸಿದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು.

ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಚಿತ್ರದುರ್ಗ ತಾಲೂಕು ಆಡಳಿತ ವತಿಯಿಂದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು, ಗ್ರಾಮೀಣ ಭಾಗದ ಜನರು ಜಾತಿ, ಆದಾಯ, ವಾಸಸ್ಥಳ ಸೇರಿದಂತೆ ವಿವಿಧ ಪ್ರಮಾಣಪತ್ರಗಳು, ಪಿಂಚಣಿ, ಪಡಿತರ ಚೀಟಿ, ಕಂದಾಯ ದಾಖಲೆಗಳು, ಕೃಷಿ ಸಂಬಂಧಿತ ಸೌಲಭ್ಯಗಳು, ವಸತಿ ಯೋಜನೆಗಳು, ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಇಂತಹ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಸ್ಪಂದಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ ಎಂದರು.

ಪ್ರಜಾ ಸೇವಾ ಮೂಲಕ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಗ್ರಾಮಸ್ಥರಿಗೆ ಒಂದೇ ಸ್ಥಳದಲ್ಲಿ ಹಲವು ಸರ್ಕಾರಿ ಸೇವೆಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ದೊರೆಯುವಂತಾಗಿದೆ.

ಗ್ರಾಮೀಣ ಜನರ ಸಮಸ್ಯೆಗಳಿಗೆ ಆದ್ಯತೆ
ಸರ್ಕಾರದ ಯೋಜನೆಗಳು ಕೇವಲ ಕಚೇರಿ ಕಡತಗಳಲ್ಲಿ ಉಳಿಯದೆ, ನಿಜವಾದ ಫಲಾನುಭವಿಗಳಿಗೆ ತಲುಪಬೇಕು ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ.

ವಿಶೇಷವಾಗಿ ರೈತರು, ಮಹಿಳೆಯರು, ವೃದ್ಧರು, ವಿಕಲಚೇತನರು, ಬಡವರು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ.
ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಸಂಪರ್ಕ, ಚರಂಡಿ ವ್ಯವಸ್ಥೆ, ಬೀದಿ ದೀಪ, ಸರ್ಕಾರಿ ಶಾಲೆ, ಅಂಗನವಾಡಿ, ಆರೋಗ್ಯ ಸೇವೆ, ಕೃಷಿ, ಪಶುಸಂಗೋಪನೆ, ನಿವೇಶನ ಹಾಗೂ ವಸತಿ ಸೇರಿದಂತೆ ಸ್ಥಳೀಯವಾಗಿ ಎದುರಾಗುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ಮಹತ್ವ ಪಡೆದಿದೆ.

ಜನ–ಸರ್ಕಾರದ ನಡುವಿನ ಅಂತರ ಕಡಿಮೆ ಮಾಡುವ ಪ್ರಯತ್ನ ಸರ್ಕಾರಿ ಸೇವೆ ಪಡೆಯಲು ಜನರು ಕಚೇರಿಗಳ ಸುತ್ತ ಅಲೆದಾಡುವ ಬದಲು, ಆಡಳಿತವೇ ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆ ರೂಪುಗೊಂಡಿರುವುದು ಗ್ರಾಮೀಣ ಜನರಿಗೆ ಅನುಕೂಲಕರವಾಗಿದೆ.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಆಶಯದಂತೆ ಸಾರ್ವಜನಿಕರು ಸಹ ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು, ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂಬ ಸಂದೇಶವೂ ಕಾರ್ಯಕ್ರಮದ ಮೂಲಕ ಮೂಡಿಬಂದಿದೆ.

ತಹಸಿಲ್ದಾರ್ ಗೋವಿಂದರಾಜು ಮಾತನಾಡಿ ಪ್ರಜಾ ಸೇವಾ ಆಂದೋಲನ ತಿಂಗಳಿಗೆ ನಾಲ್ಕು ಬಾರಿ ನಡೆಯಲಿದ್ದು ಇದರಲ್ಲಿ ಪ್ರತಿ ಶನಿವಾರದಂದು ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದೆ ಪ್ರತಿ ಹೋಬಳಿ ಮಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೇ ಸೂರಿನಡೆ ಸರ್ಕಾರಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೂಡಿ ಅರ್ಜಿದಾರರ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಾನ್ಮುಖವಾಗಿ ಅಧಿಕಾರಿಗಳು ಸೇವೆ ಸಲ್ಲಿಸುತ್ತಿದ್ದಾರೆ, ಅರ್ಜಿ ಮುಖೇನ ಬಂದಂತಹ ಸಮಸ್ಯೆಗಳಿಗೆ ಸ್ಥಳದಲ್ಲೇ ಉತ್ತರಿಸುವ ಕೆಲಸವನ್ನು ಮಾಡುವ ಜವಾಬ್ದಾರಿಯನ್ನು ಸರ್ಕಾರ ನೀಡಿದೆ ಇದರ ಅನ್ವಯವಾಗಿ ಪ್ರಜಾ ಆಂದೋಲನದ ಮೂಲಕ ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ನಡೆಯಲಿದೆ ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದ ಅಡಿಯಲ್ಲಿ ಕಾರ್ಮಿಕ ಇಲಾಖೆ, ವಿಕಲಚೇತನರ ಇಲಾಖೆ, ಕಂದಾಯ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷರಾದ ಶಿವಣ್ಣ, ತಾಲೂಕು ಪಂಚಾಯಿತಿ ಇಓ ವೈ.ರವಿಕುಮಾರ್, ಗ್ರೇಡ್-2 ತಹಶೀಲ್ದಾರ್ ನಾಗರಾಜ್, ಬಿಇಒ ಗಿರಿಜಾ, ಭದ್ರಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಅಭಿಯಂತರ ಕಿರಣ್ ಕುಮಾರ್, ಕುಶೀಲಕ್ಕೆ ಸಹಾಯಕ ನಿರ್ದೇಶಕ ರಾಮಕೃಷ್ಣ, ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಬಾಲಚಂದ್ರ ನಾಯಕ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಪರಮೇಶ್ವರಪ್ಪ, ತಾಲೂಕು ತೋಟಗಾರಿಕೆ ಇಲಾಖೆ ದೇವರಾಜ್, ಜಿಲ್ಲಾ ಗ್ಯಾರಂಟಿ ಸದಸ್ಯರಾದ ನಾಗರಾಜ್, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಕೇವಲ ದೊಡ್ಡ ಯೋಜನೆಗಳಷ್ಟೇ ಸಾಕಾಗುವುದಿಲ್ಲ. ಪ್ರತಿಯೊಂದು ಗ್ರಾಮದ ಸಣ್ಣಪುಟ್ಟ ಮೂಲಭೂತ ಸಮಸ್ಯೆಗಳಿಗೂ ಸ್ಪಂದಿಸಿ, ಜನರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ ತಲುಪಿಸುವ ಮೂಲಕವೇ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ ಎನ್ನುತ್ತಾರೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now