ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯಿಂದಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ಬೆಂಗಳೂರಿನ ಸರ್ಕಾರಿ ಶಾಲೆಗಳ ಸಮಯ ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ಸರ್ಕಾರಿ ಶಿಕ್ಷಕರ ಮನವಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಂದಿಸಿದ್ದು, ಶಾಲಾ ಸಮಯ ಬದಲಾವಣೆ ಕುರಿತು ಸಂಬಂಧಿತ ಇಲಾಖೆಗಳೊಂದಿಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
ಸದ್ಯ ಬೆಂಗಳೂರಿನ ಸರ್ಕಾರಿ ಶಾಲೆಗಳು ಬೆಳಗ್ಗೆ 10.30ರಿಂದ ಸಂಜೆ 4.30ರವರೆಗೆ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಹೋಲಿಸಿದರೆ ಹಲವು ಖಾಸಗಿ ಶಾಲೆಗಳು ಬೆಳಗ್ಗೆ 8.45ರಿಂದ ಮಧ್ಯಾಹ್ನ 3.45ರವರೆಗೆ ನಡೆಯುತ್ತಿವೆ. ಸರ್ಕಾರಿ ಶಾಲೆಗಳ ಸಮಯದಲ್ಲೂ ಬದಲಾವಣೆ ಮಾಡಿದರೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಪ್ರಸ್ತುತ ಶಾಲಾ ಅವಧಿಯಲ್ಲೇ ಹಾಲು, ಮೊಟ್ಟೆ ವಿತರಣೆ ಹಾಗೂ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ನಡೆಯುತ್ತಿದ್ದು, ಬಿಸಿಯೂಟಕ್ಕೆ ಕನಿಷ್ಠ ಒಂದು ಗಂಟೆ ಸಮಯ ವ್ಯಯವಾಗುತ್ತಿದೆ. ಇದರಿಂದ ಪಾಠ ಬೋಧನೆಗೆ ಲಭ್ಯವಾಗುವ ಸಮಯದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳ ಸಮಯವನ್ನು ಬೆಳಗ್ಗೆ 8.30ರಿಂದ ಮಧ್ಯಾಹ್ನ 3.30ರವರೆಗೆ ನಿಗದಿಪಡಿಸುವ ಸಲಹೆ ನೀಡಲಾಗಿದೆ. ಈ ಸಮಯ ಜಾರಿಯಾದರೆ ಸಂಜೆ ವೇಳೆಯ ಪೀಕ್ ಅವರ್ ಟ್ರಾಫಿಕ್ ಆರಂಭವಾಗುವ ಮುನ್ನವೇ ವಿದ್ಯಾರ್ಥಿಗಳು ಮನೆ ಸೇರಲು ಅನುಕೂಲವಾಗಲಿದೆ.
ಶಾಲಾ ಸಮಯ ಬದಲಾವಣೆ ಕುರಿತು ಶೀಘ್ರದಲ್ಲೇ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಖಾಸಗಿ ಶಾಲೆಗಳ ವಾಹನ ಮಾಲೀಕರು, ಪೋಷಕರು ಹಾಗೂ ಶಿಕ್ಷಕರೊಂದಿಗೆ ಚರ್ಚೆ ನಡೆಸಿ, ಎಲ್ಲರ ಅಭಿಪ್ರಾಯಗಳನ್ನು ಪರಿಗಣಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.











