ಚಿತ್ರದುರ್ಗ. ಸೆ.18: ಜಿಲ್ಲೆಯಲ್ಲಿ ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026’ರ (ಎಸ್ಐಆರ್) ಅಂಗವಾಗಿ ಮತದಾರರ ಪಟ್ಟಿಯನ್ನು ದೋಷಮುಕ್ತಗೊಳಿಸಲು ಮತ್ತು ಶುದ್ಧಗೊಳಿಸುವ ನಿಟ್ಟಿನಲ್ಲಿ ಒಟ್ಟು 64,611 ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ರಮ್ಯಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಎಸ್ಐಆರ್ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮನೆ ಮನೆ ಸಮೀಕ್ಷೆ ನಡೆಸಲಾಗಿದ್ದು, ಮ್ಯಾಪಿಂಗ್ ಆಗದೆ ಇರುವ ಹಾಗೂ ವಿವರಗಳು ತಪ್ಪಾಗಿರುವ ಮತದಾರರನ್ನು ಗುರುತಿಸಿ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 68,752 ನೋಟಿಸ್ಗಳನ್ನು ಸೃಜನೆ ಮಾಡಲಾಗಿದೆ. ಇದರಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿಯಾಗಿದ್ದು, 4,139 ಮತದಾರರಿಗೆ ನೋಟಿಸ್ ಜಾರಿ ಮಾಡುವುದು ಬಾಕಿ ಇದೆ. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಎಂದರೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 30,021 ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಪಡೆದ ಸಂಬಂಧಪಟ್ಟ ಮತದಾರರು ತಮ್ಮ ವ್ಯಾಪ್ತಿಯ ಮತದಾರರ ನೋಂದಣಾಧಿಕಾರಿಗಳು ಅಥವಾ ಸಹಾಯಕ ನೋಂದಣಾಧಿಕಾರಿಗಳ ಮುಂದೆ ಖುದ್ದಾಗಿ ಹಾಜರಾಗಿ, ಚುನಾವಣಾ ಆಯೋಗ ನಿಗದಿಪಡಿಸಿರುವ ಸೂಕ್ತ ದಾಖಲಾತಿಗಳನ್ನು ಒದಗಿಸಿ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಆಗಸ್ಟ್ 24ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 6,46,568 ಪುರುಷರು, 6,51,154 ಮಹಿಳೆಯರು ಹಾಗೂ 67 ಇತರೆ ಸೇರಿ ಒಟ್ಟು 12,97,789 ಮತದಾರರಿದ್ದಾರೆ. ಚುನಾವಣಾ ಆಯೋಗದ ಅನುಮೋದನೆಯಂತೆ ಮತಗಟ್ಟೆಗಳ ಮರುಹೊಂದಾಣಿಕೆ ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 1,764 ಮತಗಟ್ಟೆಗಳನ್ನು ಅಂತಿಮಗೊಳಿಸಲಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸುವುದು ಪ್ರತಿಯೊಬ್ಬ ನಾಗರೀಕನ ಹಕ್ಕಾಗಿದ್ದು, ಈ ಸದಾವಕಾಶವನ್ನು ತಪ್ಪದೆ ಉಪಯೋಗಿಸಿಕೊಳ್ಳಬೇಕು. ಮತದಾರರ ಪಟ್ಟಿಯ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1950 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚುನಾವಣಾ ತಹಶೀಲ್ದಾರ್ ಬೀಬೀ ಫಾತಿಮಾ, ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ ನಾಯಕ, ಎಎಪಿ ಜಿಲ್ಲಾ ಕಾರ್ಯದರ್ಶಿ ಎಂ.ರಾಮಪ್ಪ, ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಸಿಪಿಐ (ಎಂ) ಡಿಒಸಿ ಸಿ.ಕೆ.ಗೌಸ್ಪೀರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಇದ್ದರು.











