ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಏಳು ಅಪರಾಧಿಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಶಿಕ್ಷೆಯ ವಿರುದ್ಧ ಅವರು ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ, ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಹೈಕೋರ್ಟ್ ಈ ಆದೇಶ ನೀಡಿದೆ.
ವಿಕ್ರಂ ಬಳ್ಳಾರಿ, ಕೀರ್ತಿಕುಮಾರ ಬಸವರಾಜ ಕುರುಹಟ್ಟಿ, ಸಂದೀಪ್ ಸೌದತ್ತಿ ಅಲಿಯಾಸ್ ಸ್ಯಾಂಡಿ, ವಿನಾಯಕ ಕಟಗಿ, ಮಹಾಬಲೇಶ್ವರ ಹೊಂಗಲ್ ಅಲಿಯಾಸ್ ಮುದುಕ, ಸಂತೋಷ ಸವದತ್ತಿ ಹಾಗೂ ವಿಕಾಸ ಕಲಬುರಗಿ ಜಾಮೀನು ಪಡೆದಿರುವ ಏಳು ಮಂದಿ.
ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜ ಅವರ ವಿಭಾಗೀಯ ಪೀಠವು ಏಳು ಮಂದಿ ಸಲ್ಲಿಸಿದ್ದ ಮೇಲ್ಮನವಿಗಳಲ್ಲಿನ ಮಧ್ಯಂತರ ಅರ್ಜಿಗಳ ವಿಚಾರಣೆ ನಡೆಸಿ, ಮೇಲ್ಮನವಿಗಳು ಇತ್ಯರ್ಥವಾಗುವವರೆಗೆ ವಿಚಾರಣಾ ನ್ಯಾಯಾಲಯದ ಶಿಕ್ಷೆಯನ್ನು ಅಮಾನತಿನಲ್ಲಿರಿಸಲು ಆದೇಶಿಸಿದೆ.
ಹೈಕೋರ್ಟ್ ಜಾಮೀನು ನೀಡುವ ವೇಳೆ ಹಲವು ಷರತ್ತುಗಳನ್ನು ವಿಧಿಸಿದೆ. ಪ್ರತಿಯೊಬ್ಬರೂ ₹5 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಅಷ್ಟೇ ಮೊತ್ತಕ್ಕೆ ಇಬ್ಬರು ಜಾಮೀನುದಾರರನ್ನು ಒದಗಿಸಬೇಕು. ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶ ತೊರೆಯುವಂತಿಲ್ಲ. ಹೈಕೋರ್ಟ್ ಅಥವಾ ವಿಚಾರಣಾ ನ್ಯಾಯಾಲಯ ಸೂಚಿಸಿದಾಗ ಖುದ್ದು ಹಾಜರಾಗಬೇಕು ಎಂದು ಪೀಠ ನಿರ್ದೇಶಿಸಿದೆ.
2016ರ ಜೂನ್ 15ರಂದು ಧಾರವಾಡದ ಜಿಮ್‌ನಲ್ಲಿ ಯೋಗೀಶಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಯನ್ನು ಬಳಿಕ ಸಿಬಿಐಗೆ ವಹಿಸಲಾಗಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ 17ರಂದು ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಈ ಹಿಂದೆ ಜುಲೈ 31ರಂದು ಕರ್ನಾಟಕ ಹೈಕೋರ್ಟ್ ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿತ್ತು. ಇದೀಗ ಮತ್ತಷ್ಟು ಏಳು ಮಂದಿ ಆರೋಪಿಗಳಿಗೆ ಇದೇ ರೀತಿಯ ಮಧ್ಯಂತರ ಪರಿಹಾರ ದೊರೆತಿದೆ.











