Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನಿಂದ 3 ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿ ರಂಗನ್, ಬರ ವರದಿ ಬಗ್ಗೆ ಚರ್ಚೆ

---Advertisement---

ಬೆಂಗಳೂರು.ಸೆಪ್ಟೆಂಬರ್.21: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟ ಸಂರಕ್ಷಣೆ ಸಂಬಂಧಿತ ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭವಾಗಲಿದೆ.

ಸೆಪ್ಟೆಂಬರ್ 23ರ ವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಉಭಯ ಸದನಗಳ ಕಲಾಪಗಳು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿವೆ. ರಾಜ್ಯದ ಪ್ರಸ್ತುತ ಜ್ವಲಂತ ಸಮಸ್ಯೆಗಳ ಹಿನ್ನೆಲೆಯಲ್ಲಿ ಈ ಅಧಿವೇಶನ ಭಾರೀ ಮಹತ್ವ ಪಡೆದುಕೊಂಡಿದೆ.

ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರವು ರಾಜ್ಯದ ಪಶ್ಚಿಮ ಘಟ್ಟ ವ್ಯಾಪ್ತಿಯ 20,668 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಗುರುತಿಸಿ ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಮಲೆನಾಡು ಹಾಗೂ ಕರಾವಳಿ ಭಾಗದ ಸುಮಾರು 1,449 ಗ್ರಾಮಗಳ ಜನರ ಬದುಕು ಅತಂತ್ರವಾಗುವ ಆತಂಕ ಎದುರಾಗಿದೆ.

ಈ ವರದಿಗೆ ಆಡಳಿತ ಮತ್ತು ಪ್ರತಿಪಕ್ಷಗಳೆರಡರಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಪ್ರವಾಸ ನಡೆಸಿ ಜನರ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಸದನದಲ್ಲಿ ವಿಸ್ತೃತ ಚರ್ಚೆ ನಡೆಸಿ ಕೇಂದ್ರದ ಕರಡು ಅಧಿಸೂಚನೆ ವಿರುದ್ಧ ಅಧಿಕೃತ ನಿರ್ಣಯ ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಬಳಿಕ ದೆಹಲಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಸಾಧ್ಯತೆಯೂ ಇದೆ.

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯಾದ್ಯಂತ ಎದುರಾಗಿರುವ ಭೀಕರ ಬರ ಪರಿಸ್ಥಿತಿ, ಬೆಳೆ ನಷ್ಟ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಅಭಾವದಂತಹ ಗಂಭೀರ ಸವಾಲುಗಳು ಸದನದಲ್ಲಿ ಪ್ರತಿಧ್ವನಿಸಲಿವೆ.ಬೆಳೆ ಹಾನಿಗೆ ಪರಿಹಾರ, ರೈತರ ಸಾಲದ ಮೇಲಿನ ಒತ್ತಡ ನಿವಾರಣೆ ಹಾಗೂ ಕೇಂದ್ರದಿಂದ ಬರಬೇಕಿರುವ ಬರ ಪರಿಹಾರ ಅನುದಾನ ಬಿಡುಗಡೆ ಸೇರಿದಂತೆ ಅನ್ನದಾತರ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಉಭಯ ಸದನಗಳಲ್ಲಿ ಮಹತ್ವದ ಚರ್ಚೆಗಳು ನಡೆಯಲಿವೆ.

Join WhatsApp

Join Now

Join Telegram

Join Now