ಬೆಂಗಳೂರು : ರಾಜ್ಯದ ಹಲವೆಡೆ ಮಳೆಯ ವಾತಾವರಣ ಮುಂದುವರಿದಿದ್ದು, ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನಷ್ಟು ದಿನಗಳ ಕಾಲ ಮಳೆಯ ಅಬ್ಬರ ಇರಲಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಅಕ್ಟೋಬರ್ 25ರವರೆಗೂ ಈ ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ಆ ನಂತರ ಹವಾಮಾನದಲ್ಲಿ ಪ್ರಮುಖ ಬದಲಾವಣೆಗಳು ಕಂಡುಬರುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಮತ್ತು ಸಂಜೆಯ ಸಮಯದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ಭಾಗಗಳಲ್ಲಿ ಸಂಜೆ ವೇಳೆಗೆ ಮಳೆ ಸುರಿಯುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.











