Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿ.ಪ. ಚುನಾವಣೆಯಲ್ಲಿ ಗೆಲುವು ; ಹಿರಿಯೂರಿನಲ್ಲಿ ಮೈತ್ರಿ ಕಾರ್ಯಕರ್ತರ ಸಂಭ್ರಮಾಚರಣೆ

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 28 : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಸಂಘಟಿತರಾಗಿ ಶ್ರಮಿಸಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಕೆ. ಅಭಿನಂದನ್ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು.

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕೆ.ಎಂ. ಸುರೇಶ್ ಅವರು ಸುಮಾರು 23 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಮೈತ್ರಿ ಪಕ್ಷಗಳ ಕಾರ್ಯಕರ್ತರ ಸಂಘಟಿತ ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಎದುರಾದ ಈ ಚುನಾವಣೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಒಗ್ಗಟ್ಟಿನ ಪ್ರಯತ್ನದಿಂದ ಈ ಗೆಲುವು ಸಾಧ್ಯವಾಗಿದೆ ಎಂದ ಅವರು

ಚುನಾವಣಾ ಫಲಿತಾಂಶವು ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕಿದೆ. ಹಿರಿಯೂರು ಉಪಚುನಾವಣೆ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. 2028ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದರು. ಗೆಲುವಿಗೆ ಶ್ರಮಿಸಿದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭಿನಂದನ್ ಧನ್ಯವಾದ ಅರ್ಪಿಸಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಕೆ. ಶಂಕರಮೂರ್ತಿ ಮಾತನಾಡಿ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕೆ.ಎಂ. ಸುರೇಶ್ ಅವರ ಗೆಲುವಿಗಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿದ್ದಾರೆ. ಇದೇ ರೀತಿಯ ಒಗ್ಗಟ್ಟು ಮುಂದಿನ ದಿನಗಳಲ್ಲಿಯೂ ಮುಂದುವರಿಯಬೇಕು. ಎರಡೂ ಪಕ್ಷಗಳ ನಡುವೆ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದೆ, ಪರಸ್ಪರ ಸಹಕಾರದೊಂದಿಗೆ ಸಂಘಟನೆಯನ್ನು ಬಲಪಡಿಸಬೇಕು. ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಮುಂಬರುವ ಚುನಾವಣೆಗಳಲ್ಲಿಯೂ ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಬೇಕು. ಈ ಚುನಾವಣೆಯ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಪ್ರೇರಣೆ ನೀಡಿದೆ ಎಂದು ಅಭಿಪ್ರಾಯಪಟ್ಟರು.

ಹಿರಿಯ ಜೆಡಿಎಸ್ ಮುಖಂಡ ಎಂ. ರವೀಂದ್ರಪ್ಪ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತದ ಕುರಿತು ಮತದಾರರು ತಮ್ಮ ತೀರ್ಪಿನ ಮೂಲಕ ಸಂದೇಶ ನೀಡಿದ್ದಾರೆ. ಎನ್‌ಡಿಎ ಅಭ್ಯರ್ಥಿಯ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿದ ಹಿರಿಯೂರು ತಾಲೂಕಿನ ಪದವೀಧರ ಮತದಾರರಿಗೆ ಕೃತಜ್ಞತೆ ಅರ್ಪಿಸಿದ ಅವರು ಸರ್ಕಾರದ ದುರಾಡಳಿತ ವಿರುದ್ಧ ಮತದಾರರು ಎಚ್ಚೆತ್ತುಕೊಂಡಿದ್ದಾರೆ. ಬೆಲೆ ಏರಿಕೆ, ರೈತ ವಿರೋಧಿ ಸರ್ಕಾರವನ್ನು ಪ್ರಜ್ಞಾವಂತ ಮತದಾರರು ತಿರಸ್ಕರಿಸಿದ್ದಾರೆ. ಉಪಚುನಾವಣೆಯಲ್ಲಿ ಎರಡ ಪಕ್ಷಗಳ ಕಾರ್ಯಕರ್ತರು ಒಂದಾಗಿ ಹೋಗುವ ಮೂಲಕ ಮೈತ್ರಿ ಕಾರ್ಯಕರ್ತರ ಶಕ್ತಿ ಪ್ರದರ್ಶನ ತೋರಿಸೋಣ ಎಂದರು.

ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ. ಯಶೋಧರ ಮಾತನಾಡಿ, ಪರಿಷತ್ ಚುನಾವಣೆಯ ಗೆಲುವಿನಲ್ಲಿ ಶ್ರಮಿಸಿದ ಕಾರ್ಯಕರ್ತರ ಪಾತ್ರ ಹಾಗೂ ಸಹಕಾರ ಅಪಾರವಾಗಿದೆ ಎಂದರು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. ಕಾರ್ಯಕರ್ತರ ಪರಿಶ್ರಮ ಮತ್ತು ಸಂಘಟಿತ ಪ್ರಯತ್ನವೇ ಪಕ್ಷದ ಬಲವಾಗಿದ್ದು, ಮುಂದಿನ ದಿನಗಳಲ್ಲಿಯೂ ಇದೇ ಉತ್ಸಾಹದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಎಂ. ಜಯಣ್ಣ ಮಾತನಾಡಿ, ಮುಂಬರುವ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವನ್ನು ಪ್ರತಿಪಾದಿಸಿದರು.

ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಎಂ.ಎಸ್. ರಾಘವೇಂದ್ರ, ಎ. ರಾಘವೇಂದ್ರ, ಚಿದಾನಂದ್, ಶಿವಣ್ಣ, ಹನುಮಂತರಾಯ, ನಾಗರಾಜ್, ಜಲ್ದಪ್ಪ, ನಿತಿನ್ ಗೌಡ, ಕೇಶವಮೂರ್ತಿ, ಕೆ.ಟಿ. ಹನುಮಂತ, ರಾಕೇಶ್, ಪ್ರಜ್ವಲ್, ಗೋವಿಂದಪ್ಪ, ಪರಮೇಶ್, ಚರಣ್, ಬಸವರಾಜ್, ದೇವರಾಜ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now