ಬಳ್ಳಾರಿ,ಅ.29 : ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹಾಗೂ ಸಾವು-ನೋವುಗಳನ್ನು ತಡೆಗಟ್ಟುವ ಉದ್ದೇಶದಿಂದ ನವೆಂಬರ್ 2 ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಈ ಹಿಂದೆ ಜೂನ್ 1 ರಿಂದಲೇ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು. ಆರಂಭದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತಾದರೂ, ನಂತರದ ದಿನಗಳಲ್ಲಿ ಪೊಲೀಸರ ತಪಾಸಣೆ ಕಡಿಮೆಯಾದ ಕಾರಣ ನಗರ ಪ್ರದೇಶಗಳಲ್ಲಿ ಹೆಲ್ಮೆಟ್ ಧರಿಸುವವರ ಸಂಖ್ಯೆ ಮತ್ತೆ ಇಳಿಮುಖವಾಗಿತ್ತು.
ಇತ್ತೀಚೆಗೆ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಗಳನ್ನು ಪರಿಶೀಲಿಸಿದಾಗ, ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಗಾಯಗಳಾಗಿ ಅನೇಕ ಸವಾರರು ಸಾವನ್ನಪ್ಪಿರುವುದು ಮತ್ತು ಅಂಗವೈಕಲ್ಯಕ್ಕೆ ತುತ್ತಾಗಿರುವುದು ಕಂಡುಬAದಿದೆ.
ಈ ಹಿನ್ನೆಲೆಯಲ್ಲಿ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ನವೆಂಬರ್ 2 ರಿಂದ ಹೆಲ್ಮೆಟ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಹಾಗೂ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ, ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ತಮ್ಮ ಅಮೂಲ್ಯ ಜೀವವನ್ನು ರಕ್ಷಿಸಿಕೊಳ್ಳಬೇಕಾಗಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.











