ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 29 : ಯಾರಾದರೂ ನಿಮ್ಮ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಲೈಂಗಿಕ ಕಿರುಕುಳ ನೀಡಿದರೆ ಮುಜುಗರಪಟ್ಟುಕೊಳ್ಳದೆ ನಿಮ್ಮ ಪೋಷಕರು, ಗುರು-ಹಿರಿಯರ ಬಳಿ ಹೇಳಿಕೊಂಡು ರಕ್ಷಣೆ ಪಡೆದುಕೊಳ್ಳಿ ಎಂದು ಮೂರನೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ನಿಖಿತ ಎಸ್.ಅಕ್ಕಿ ವಿದ್ಯಾರ್ಥಿನಿಯರಲ್ಲಿ ಆತ್ಮಸ್ಥೈರ್ಯ ತುಂಬಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ವಾಸವಿ ವಿದ್ಯಾಸಂಸ್ಥೆಯಲ್ಲಿ ಗುರುವಾರ
ಏರ್ಪಡಿಸಲಾಗಿದ್ದ ಸುರಕ್ಷಿತ್ ಬಚ್ಪನ್ ಅಭಿಯಾನ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಫೋಕ್ಸೋ ಕಾಯಿದೆ ಇರುವುದೆ ಅಪ್ರಾಪ್ತ ಬಾಲಕಿಯರ ರಕ್ಷಣೆಗಾಗಿ. ಅಪರಿಚಿತರೊಂದಿಗೆ ಸಲುಗೆಯಿಂದ ವರ್ತಿಸುವುದು ಅಪಾಯಕಾರಿ. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಿ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ. ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಕೊಟ್ಟು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ತಿಳಿಸಿದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ, ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಸತ್ಯನಾರಾಯಣಶೆಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ
ಸಹಾಯಕ ಶಿಶು ಅಭಿವೃದ್ದಿ ಅಧಿಕಾರಿ ಮಂಜುಳ ಇವರುಗಳು ವೇದಿಕೆಯಲ್ಲಿದ್ದರು.










