Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್ ಸಿಪಿ ಟಿಎಸ್ ಪಿ ಅನುದಾನ ಸಮರ್ಪಕವಾಗಿ ಬಳಸಿ : ಸಚಿವ ಟಿ ರಘುಮೂರ್ತಿ ಸೂಚನೆ

---Advertisement---

ಕೊಪ್ಪಳ : ಎಸ್ಸಿಪಿ-ಟಿಎಸ್ಪಿ ಅನುದಾನವು ದುರ್ಬಲ ವರ್ಗದವರ ಅಭಿವೃದ್ಧಿಗಾಗಿ ಮೀಸಲಾಗಿದ್ದು, ಅದನ್ನು ಅರ್ಹ ಫಲಾನುಭವಿಗೆ ತಲುಪಿಸುವ ಮೂಲಕ ಅನುದಾನವನ್ನು ಸಮರ್ಪಕವಾಗಿ ಬಳಸಿ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ ರಘುಮೂರ್ತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನವೆಂಬರ್ 13ರಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಅನುಸುಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ/ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಅಕ್ಟೋಬರ್ -2026 ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಂದು ಇಲಾಖೆಯಲ್ಲಿಯೂ ಎಸ್ಸಿಪಿ-ಟಿಎಸ್ಪಿ ಕಾರ್ಯಕ್ರಮದಡಿ ನಿರ್ದಿಷ್ಟ ಅನುದಾನವನ್ನು ಸರ್ಕಾರ ಮೀಸಲಿಡುತ್ತದೆ. ಅದರಂತೆ ಇಲಾಖಾ ಅಧಿಕಾರಿಗಳು ಅರ್ಹ ಎಲ್ಲ ಫಲಾನುಭವಿಗಳಿಗೆ ಕಾರ್ಯಕ್ರಮದ ಸೌಲಭ್ಯ ಒದಗಿಸಬೇಕು. ಒಬ್ಬರಿಗೆ ಪದೇ ಪದೇ ಅವಕಾಶ ಕೊಡುವುದಕ್ಕಿಂತ ಬೇರೆ ಫಲಾನುಭವಿಗಳಿಗೂ ಅವಕಾಶ ನೀಡಬೇಕು. ಆದ್ದರಿಂದ ಪ್ರತಿ ಆರ್ಥಿಕ ವರ್ಷದಲ್ಲಿ ಕಾರ್ಯಕ್ರಮದ ಕ್ರಿಯಾ ಯೋಜನೆ ತಯಾರಿಸಿ, ಕಳೆದ ಸಾಲಿನ ಫಲಾನುಭವಿಗಳ ಪಟ್ಟಿಯೊಂದಿಗೆ ತಾಳೆ ನೋಡಿ, ಸೌಲಭ್ಯ ವಂಚಿತರಾದವರಿಗೆ ಅವಕಾಶ ನೀಡಬೇಕು. ಇಲಾಖಾ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳ ಸಂಖ್ಯೆ, ನೀಡುವ ಸೌಲಭ್ಯದ ಕುರಿತು ಆಯಾ ಇಲಾಖಾ ಅಧಿಕಾರಿಗಳಿಗೆ ಎಲ್ಲ ಮಾಹಿತಿ ಇರಬೇಕು ಎಂದು ಅವರು ತಿಳಿಸಿದರು.

ಎಸ್ಸಿ-ಎಸ್ಟಿ ವಸತಿ ನಿಲಯಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆ ಇರುವೆಡೆ ವಿದ್ಯಾರ್ಥಿಗಳಿಗೆ ಎಲ್ಲ ಅಗತ್ಯ ಮೂಲಸೌಕರ್ಯ ನೀಡುವುದು ಸವಾಲಾಗಿ ಪರಿಣಮಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಬಾಡಿಗೆ ಕಟ್ಟಡಗಳನ್ನು ಪಡೆದು ಸ್ವಚ್ಛತೆ, ಶುದ್ಧ ಆಹಾರ, ಕುಡಿಯುವ ನೀರು ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯ ಒದಗಿಸಬೇಕು. ಸರ್ಕಾರದಿಂದ ನೀಡಲಾಗುವ ಅನುದಾನವನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ ಎಂದು ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೆಬ್ಸೈಟ್ ನಲ್ಲಿ ಅಳವಡಿಸಿ: 2023 ರಿಂದ ಇದುವರೆಗೆ ಆಯಾ ಇಲಾಖೆಗಳಲ್ಲಿ ಕಾರ್ಯ ಅನುಷ್ಠಾನಗೊಂಡ ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಗಳ ಪ್ರಗತಿ ಮಾಹಿತಿಯನ್ನು ಎಲ್ಲ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಿ ಚಿತ್ರ ಸಮೇತ ವೆಬ್ಸೈಟ್ ನಲ್ಲಿ ಅಪ್ ಲೋಡ್ ಮಾಡಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತದೆ ಎಂಬುದರ ಬಗ್ಗೆ ಜನತೆಗೆ ಮನವರಿಕೆ ಮಾಡಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾ ಪಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಡಿಎಫ್ಒ ನಿರ್ಮಲಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now