ಸುದ್ದಿಒನ್, ಚಳ್ಳಕೆರೆ, ನವೆಂಬರ್. 15 : ಸಂಗೀತ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳ ನಿರಂತರವಾಗಿ ಸೇವೆ ಸಲ್ಲಿಸುತ್ತಾ, ತಮ್ಮ ವಿಶಿಷ್ಟ ಗಾಯನ ಪ್ರತಿಭೆಯ ಮೂಲಕ ಗುರುತಿಸಿಕೊಂಡಿರುವ ತಾಲೂಕಿನ ಹಿರೇಹಳ್ಳಿ ಗ್ರಾಮದ ಯುವ ಹಿನ್ನೆಲೆ ಗಾಯಕ ಹಿರೇಹಳ್ಳಿ ನವೀನ್ ಕುಮಾರ್ ಸಿ.ಆರ್. ಅವರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೂಡ್ಲಿಗಿ ಪಟ್ಟಣದ ವಿನಾಯಕ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಕಲಾಭಾರತಿ ಕಲಾ ಸಂಘ (ರಿ.), ಹಿರೇಹೆಗ್ಗಾಳ್ ವತಿಯಿಂದ ಆಯೋಜಿಸಿದ್ದ ಎಂಟನೇ ವರ್ಷದ ಸಾಂಸ್ಕೃತಿಕ ಕಲೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಗೌರವ ಪ್ರದಾನ ಮಾಡಲಾಯಿತು.
ನವೀನ್ ಕುಮಾರ್ ಅವರು ಕಳೆದ ಹತ್ತು ವರ್ಷಗಳಿಂದ ಯುವ ಹಿನ್ನೆಲೆ ಗಾಯಕರಾಗಿ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ. ನಾಟಕಗಳು, ಮದುವೆ ಸಮಾರಂಭಗಳು ಹಾಗೂ ವಿವಿಧ ಶುಭ ಸಮಾರಂಭಗಳಲ್ಲಿ ದ್ವಿಕಂಠ ಗಾಯನದ ಮೂಲಕ ಸಂಗೀತ ಪ್ರಿಯರನ್ನು ರಂಜಿಸುತ್ತಾ ಬಂದಿದ್ದಾರೆ. ತಮ್ಮ ಕಂಠಸಿರಿ, ಗಾಯನ ಶೈಲಿ ಹಾಗೂ ಸಂಗೀತದ ಮೇಲಿನ ಅಭಿರುಚಿಯಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ.
ಗ್ರಾಮೀಣ ಪ್ರತಿಭೆಯಾಗಿ ಸಂಗೀತ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ನವೀನ್ ಕುಮಾರ್ ಅವರಿಗೆ ರಾಜ್ಯ ಪ್ರಶಸ್ತಿ ಲಭಿಸಿರುವುದು ಹಿರೇಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಭಾಗದ ಜನರಲ್ಲಿ ಸಂತಸ ಮೂಡಿಸಿದೆ. ಪ್ರಶಸ್ತಿ ಪಡೆದ ಯುವ ಗಾಯಕನಿಗೆ ಗ್ರಾಮಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿ, ಅವರ ಸಂಗೀತ ಪಯಣ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.











