Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು, ತಿದ್ದುಪಡಿಗೆ ಅವಕಾಶ

---Advertisement---

ದಾವಣಗೆರೆ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ 1200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ (Rationalization) ಪ್ರಕ್ರಿಯೆಯಡಿ ಹೊಸದಾಗಿ 12 ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಅಲ್ಲದೆ, ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಹಾಗೂ ಮರುಜೋಡಣಾ ಕಾರ್ಯವು ನವೆಂಬರ್ 23 ರಂದು ನಡೆಯಲಿದೆ. ಡಿಸೆಂಬರ್ 1 ರಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ಸಾರ್ವಜನಿಕರು ಡಿಸೆಂಬರ್ 1 ರಿಂದ 31 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಸ್ವೀಕೃತವಾದ ಆಕ್ಷೇಪಣೆಗಳನ್ನು 2027 ರ ಜನವರಿ 14 ರೊಳಗೆ ವಿಲೇವಾರಿ ಮಾಡಿ, ಜನವರಿ 20 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ಯುವ ಮತದಾರರಿಗೆ ಮುಂಚಿತ ಅರ್ಜಿ ಸಲ್ಲಿಕೆ ಅವಕಾಶ: 2027 ರ ಜನವರಿ 1 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರು ಹಾಗೂ ಈವರೆಗೆ ಪಟ್ಟಿಯಿಂದ ಹೆಸರು ಕೈಬಿಟ್ಟುಹೋದವರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಇದರೊಂದಿಗೆ 2027 ರ ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1 ಕ್ಕೆ 18 ವರ್ಷ ತುಂಬುವ ಯುವ ಮತದಾರರು ಸಹ ಮುಂಗಡವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.

ಅರ್ಜಿ ನಮೂನೆಗಳ ವಿವರ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಮೂನೆ-6, ವಿದೇಶಗಳಲ್ಲಿ ನೆಲೆಸಿರುವ ಭಾರತೀಯ ನಾಗರಿಕರ ಹೆಸರು ಸೇರ್ಪಡೆಗೆ ನಮೂನೆ-6ಎ, ಹೆಸರು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ನಮೂನೆ-7 ಹಾಗೂ ತಿದ್ದುಪಡಿ ಮತ್ತು ಸ್ಥಳಾಂತರಕ್ಕಾಗಿ ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರು ‘ECI Net’ ಆ್ಯಪ್ ಅಥವಾ ಅಧಿಕೃತ ವೆಬ್‌ಸೈಟ್ ([https://voters.eci.gov.in](https://voters.eci.gov.in)) ಮೂಲಕ ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

12 ಹೊಸ ಮತಗಟ್ಟೆಗಳ ಸ್ಥಾಪನೆ: ಮತದಾರರ ಸಂಖ್ಯೆ 1200 ಕ್ಕಿಂತ ಹೆಚ್ಚಿರುವ ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಪ್ರಕ್ರಿಯೆಯಡಿ, ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 12 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಇದರಲ್ಲಿ 103-ಜಗಳೂರು (01), 105-ಹರಿಹರ (01), 106-ದಾವಣಗೆರೆ ಉತ್ತರ (04), 107-ದಾವಣಗೆರೆ ದಕ್ಷಿಣ (00), 108-ಮಾಯಾಕೊಂಡ (03), 109-ಚನ್ನಗಿರಿ (01) ಹಾಗೂ 110-ಹೊನ್ನಾಳಿ (02) ಕ್ಷೇತ್ರಗಳ ಮತಗಟ್ಟೆಗಳು ಸೇರಿವೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಹಾಗೂ ಪರಿಷ್ಕರಣಾ ಕಾರ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಹೆಚ್ಚಿನ ರೀತಿಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಕೋರಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಚುನಾವಣಾ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now