ಕೊಪ್ಪಳ: ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ದಾಖಲಾತಿ ಹೆಚ್ಚಳವನ್ನು ಅಧಿಕಾರಿಗಳು ಒಂದು ಆಂದೋಲನದಂತೆ ಪರಿಗಣಿಸಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ ಸಭಾಂಗಣದಲ್ಲಿ ನವೆಂಬರ್ 20 ರಂದು ಹಮ್ಮಿಕೊಂಡಿದ್ದ ಕೊಪ್ಪಳ ಜಿಲ್ಲಾ ಮಟ್ಟದ ಶಾಲಾ ಶಿಕ್ಷಣ ಇಲಾಖೆಯ 2026–27ನೇ ಸಾಲಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂದನೇ ತರಗತಿ ದಾಖಲಾತಿ ವಯೋಮಿತಿ ನಿಯಮದ ಬದಲಾವಣೆಯಿಂದಾಗಿ ಕಳೆದ ಸಾಲಿಗಿಂತ ಈ ಬಾರಿ ಸುಮಾರು 6,000 ಮಕ್ಕಳ ದಾಖಲಾತಿ ಕಡಿಮೆಯಾಗಿರುವ ಕುರಿತು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಸರ್ಕಾರದಿಂದ ಉಚಿತ ವಿದ್ಯುತ್, ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್, ಅತಿಥಿ ಶಿಕ್ಷಕರು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೂ ಮಕ್ಕಳು ಸರ್ಕಾರಿ ಶಾಲೆಗಳಿಗೆ ಬಾರದಿದ್ದರೆ ನಮ್ಮ ಮೇಲಿನ ವಿಶ್ವಾಸ ಕಡಿಮೆಯಾಗುತ್ತದೆ. ಹಾಗಾಗಿ ಜಿಲ್ಲೆಯಲ್ಲಿ ಆರಂಭಿಸಲಾಗಿರುವ 203 ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಹೆಚ್ಚಿನ ಮಕ್ಕಳನ್ನು ದಾಖಲಿಸಿಕೊಳ್ಳುವ ಮೂಲಕ ಒಂದನೇ ತರಗತಿಯ ದಾಖಲಾತಿ ತಾನಾಗಿಯೇ ಹೆಚ್ಚಾಗುವಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಪರೀಕ್ಷೆಗೆ ಗೈರಾಗುವ ಮಕ್ಕಳ ಮನೆಗೆ ಭೇಟಿ ನೀಡಿ: ಎಸ್ಎಸ್ಎಲ್ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದರೂ ಸುಮಾರು 1,631 ಮಕ್ಕಳು ಪರೀಕ್ಷೆಗೆ ಗೈರಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಪರೀಕ್ಷಾ ಸಮಯದಲ್ಲಿ ಶಿಕ್ಷಕರು ಮತ್ತು ಅಧಿಕಾರಿಗಳು ಗೈರಾಗುವ ಮಕ್ಕಳ ಮನೆಗೆ ಖುದ್ದು ಭೇಟಿ ನೀಡಿ, ಪೋಷಕರ ಮನವೊಲಿಸಿ, ಆ ಮಕ್ಕಳಿಗೆ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಬೇಕು. ಇದರ ಜೊತೆಗೆ ದ್ವಿತೀಯ ಪಿಯುಸಿಯಲ್ಲಿ ‘ಮಿಷನ್ 60’ ಗುರಿ ತಲುಪಲು ವಿಶೇಷ ತರಗತಿಗಳನ್ನು ನಡೆಸಬೇಕು ಹಾಗೂ ಮೌಲ್ಯ ಶಿಕ್ಷಣಕ್ಕೆ (ಮಾರಲ್ ಸೈನ್ಸ್) ಹೆಚ್ಚಿನ ಒತ್ತು ನೀಡಬೇಕು. ಮಕ್ಕಳ ಪಾಲಕರ ಮತ್ತು ಶಿಕ್ಷಕರ ಸಭೆಗಳನ್ನು ಸಹ ನಿಯಮಿತವಾಗಿ ಹಮ್ಮಿಕೊಳ್ಳಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಮುಂದಿನ ಜೂನ್ನಿಂದ ಕೆಪಿಎಸ್ ಶಾಲಾ ಮಕ್ಕಳಿಗೆ ಪ್ರತ್ಯೇಕ ಉಚಿತ ಬಸ್
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) ಒಂದೇ ಸೂರಿನಡಿ 14 ವರ್ಷಗಳ ಸಮಗ್ರ ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಬಸ್ಗಳಲ್ಲಿ ಮಕ್ಕಳಿಗೆ ಆಗುತ್ತಿರುವ ಸಮಯದ ವ್ಯತ್ಯಯ ತಪ್ಪಿಸಲು ಮುಂದಿನ ಜೂನ್ ತಿಂಗಳಿನಿಂದ ಕೆಪಿಎಸ್ ಶಾಲಾ ಮಕ್ಕಳಿಗಾಗಿಯೇ ಸರ್ಕಾರದಿಂದ ಪ್ರತ್ಯೇಕ ಉಚಿತ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದಿಂದ 1ರಿಂದ 12ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಿಸಲಾಗುವುದು. ಪಠ್ಯಪುಸ್ತಕಗಳ ಭಾಗ-1 ಮತ್ತು ಭಾಗ-2ನ್ನು ಒಟ್ಟಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.












