ಚಿತ್ರದುರ್ಗ : ಸರ್ಕಾರಿ ಯೋಜನೆಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೆಹರೂ ಮೈದಾನದಲ್ಲಿ ಪ್ರಜಾಸೇವಾ ಅಭಿಯಾನದ ಅಂಗವಾಗಿ ಶನಿವಾರ ಆಯೋಜಿಸಿದ್ದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ, ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರಿಗೆ ದೊರೆಯುವ ಸೇವೆಗಳ ಕುರಿತು ಜನರಲ್ಲಿ ಅರಿವು ಮೂಡಿಸುವಲ್ಲಿ ಇಂತಹ ಪ್ರದರ್ಶನಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಸಿಎಂ ಅಭಿಪ್ರಾಯಪಟ್ಟರು. ಈ ವೇಳೆ ವಿವಿಧ ಇಲಾಖೆಗಳ ಮಳಿಗೆಗಳಿಗೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ರಘುಮೂರ್ತಿ, ಬಿ.ಜಡ್. ಜಮೀರ್ ಅಹಮದ್ ಖಾನ್, ಎನ್. ಚಲುವರಾಯಸ್ವಾಮಿ, ಎಚ್.ಸಿ. ಬಾಲಕೃಷ್ಣ, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಶಾಸಕರಾದ ಕುಣಿಗಲ್ ರಂಗನಾಥ್, ಬಿ.ಜಿ. ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ, ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಉಪಸ್ಥಿತರಿದ್ದರು.
ಇವರೊಂದಿಗೆ ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಯೋಗೇಶ್ ಬಾಬು, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಹಾರೋಗೆರೆ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್, ಸೋಮಣ್ಣ, ಕಾಂಗ್ರೆಸ್ ಮುಖಂಡ ಸುಹಾಸ್ ಸುಧಾಕರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.











