ಚಿತ್ರದುರ್ಗ, (ಮಾರ್ಚ್.18) : ಆಶಾ ಕಾರ್ಯಕರ್ತೆಯರ ಕೆಲಸ ಸಾಕಷ್ಟು ಜವಾಬ್ದಾರಿಯುತವಾದುದಾಗಿದೆ. ಕೋವಿಡ್ ಸೋಂಕು ನಿಯಂತ್ರಣದಲ್ಲಿ ಆಶಾಕಾರ್ಯಕರ್ತೆಯರ ಪಾತ್ರ ಹಿರಿದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಆವರಣದಲ್ಲಿ ಶುಕ್ರವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಇನ್ನರ್ ವ್ಹೀಲ್ ಕ್ಲಬ್ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಆಶಾಕಾರ್ಯಕರ್ತೆಯರಿಗೆ ಹೈಜಿನ್ ಕಿಟ್ ಹಾಗೂ ಮಾಸ್ಕ್ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಶಾ ಕಾರ್ಯಕರ್ತೆಯರು ಮನೆ – ಮನೆಗೆ ಹೋಗಿ ಕೋವಿಡ್ ಕುರಿತು ಜಾಗೃತಿ ಮೂಡಿಸಿದ್ದಾರೆ. ಕೋವಿಡ್ ನಿಯಂತ್ರಣದಲ್ಲಿ ಅವರ ಸೇವೆ ಶ್ಲಾಘನೀಯ. ಕೊರೊನಾ ಬರುವುದಕ್ಕಿಂತ ಮುಂಚೆ ಆಶಾಕಾರ್ಯಕರ್ತೆಯರು ಎಂದರೆ ಯಾರು ಎಂದು ಅಷ್ಟಾಗಿ ಯಾರಿಗೂ ತಿಳಿದಿರಲಿಲ್ಲ. ಕೊರೊನಾ ಬಂದ ಬಳಿಕ ನಿಮ್ಮ ಕಾರ್ಯವೈಖರಿಯಿಂದ ಆಶಾ ಕಾರ್ಯಕರ್ತರು ಯಾರೆಂದು ಎಲ್ಲರಿಗೂ ಗೊತ್ತಾಗಿದೆ ಎಂದು ಹೇಳಿದರು.
ಆಶಾಕಾರ್ಯಕರ್ತೆಯರಿಗೆ ಯಾವುದೇ ರೀತಿಯ ಸಮಸ್ಯೆ, ಕಿರುಕುಳವಾದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ. ಒಂದು ಪಕ್ಷ ಅಲ್ಲಿ ಸರಿಯಾದ ರೀತಿಯಲ್ಲಿ ನ್ಯಾಯ ಸಿಗದಿದ್ದರೆ ಪೊಲೀಸ್ ಅಧೀಕ್ಷಕರ ಕಚೇರಿಗೆ ಬಂದು ದೂರು ಸಲ್ಲಿಸಬಹುದು ಎಂದು ತಿಳಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಆಡಳಿತ ಮಂಡಳಿ ಸದಸ್ಯೆ ಗಾಯತ್ರಿ ಶಿವರಾಂ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿದಂತಹ ಮುಂಚೂಣಿ ಕಾರ್ಯಕರ್ತರಿಗೆ ಹೈಜಿನ್ ಕಿಟ್ ವಿತರಿಸುತ್ತಿದ್ದು, ಇಂದು ಪ್ರಪ್ರಥಮವಾಗಿ ಆಶಾ ಕಾರ್ಯಕರ್ತೆಯರಿಗೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಆರೋಗ್ಯ ಸಿಬ್ಬಂದಿ, ಪೌರಕಾರ್ಮಿಕರು, ಅಂಗನವಾಡಿ ಸಿಬ್ಬಂದಿ, ಪೊಲೀಸ್ ಇಲಾಖೆಯ ಪ್ರಂಟ್‍ಲೈನ್ ವರ್ಕರ್ಸ್‍ಗೆ ಕಿಟ್ ನೀಡುವುದು ನಮ್ಮ ಮುಂದಿನ ಗುರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಮಜಹರ್ ಉಲ್ಲಾ, ಖಜಾಂಚಿ ಅರುಣ್‍ಕುಮಾರ್, ನಿರ್ದೇಶಕರಾದ ಗಿರೀಶ್, ಶ್ರೀನಿವಾಸ್, ವೀರೇಶ್, ಶಿವರಾಂ, ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷ ಚೆಲುವರಾಜ್, ನಾಗರಾಜ್ ಸಂಗಂ, ಲವಕುಮಾರ್, ಪದ್ಮಜ, ಮಾರುತಿ ಪ್ರಸಾದ್, ಶ್ರೀನಿವಾಸ್ ಮಳಲಿ ಸೇರಿದಂತೆ ಮತ್ತಿತರರು ಇದ್ದರು.