Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಪಿಎಸ್ ಶಾಲೆ ಹೆಸರಲ್ಲಿ 48 ಸಾವಿರ ಸರ್ಕಾರಿ ಶಾಲೆ ಮುಚ್ಚಲು ಹೊರಟಿರುವುದು ದೊಡ್ಡ ದುರಂತ : ಜೆ.ಯಾದವರೆಡ್ಡಿ ಆಕ್ರೋಶ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಏಷಿಯನ್ ಡೆವಲಪ್‍ಮೆಂಟ್ ಬ್ಯಾಂಕ್‍ನಿಂದ ರಾಜ್ಯ ಸರ್ಕಾರ 4800 ಕೋಟಿ ರೂ.ಗಳ ಷರತ್ತು ಬದ್ದ ಸಾಲ ಪಡೆದು ಕೆಪಿಎಸ್. ಶಾಲೆಗಳನ್ನು ತೆರೆದು 48 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ದೊಡ್ಡ ದುರಂತ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಅಧ್ಯಕ್ಷ
ಜೆ.ಯಾದವರೆಡ್ಡಿ ಆತಂಕ ವ್ಯಕ್ತಪಡಿಸಿದರು.

 

ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೂರು ಪಂಚಾಯಿತಿಗೆ ಒಂದರಂತೆ 3674 ಕೆಪಿಎಸ್. ಶಾಲೆ ಆರಂಭಿಸಲು 1200 ಮಕ್ಕಳನ್ನು ಕರೆತರುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಆರ್ಟಿಕಲ್ 21(ಎ) ಪ್ರಕಾರ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಉಚಿತ ಶಿಕ್ಷಣ ನೀಡಬೇಕೆಂದು ಸಂವಿಧಾನದಲ್ಲಿ ಹೇಳಿದೆ. ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ರಾಜ್ಯದಲ್ಲಿ ಹದಿನೇಳು ಲಕ್ಷ ಮಕ್ಕಳು ಶಾಲೆ ಬಿಟ್ಟಿದ್ದಾರೆ. ಇದಕ್ಕೆ ಸರ್ಕಾರಿ ಶಾಲೆಗಳಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದಿರುವುದೇ ಪ್ರಮುಖ ಕಾರಣ. ಎಡಿಬಿ.ಯಿಂದ ಪಡೆದಿರುವ 4800 ಕೋಟಿ ರೂ.ಗಳ ಸಾಲವನ್ನು ಬೀಳುವ ಹಂತದಲ್ಲಿರುವ 20 ಸಾವಿರ ಸರ್ಕಾರಿ ಶಾಲೆಗಳ ರಿಪೇರಿಗೆ ಬಳಸಲಿ ಎಂದು ಆಗ್ರಹಿಸಿದರು.

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ಕೊಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾರ್ಪೊರೇಟ್ ಉದ್ಯಮಿಗಳಿಗೆ ಅನುಕೂಲ ಮಾಡಲು ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕನ್ನಡ ಉಳಿಯಬೇಕಾದರೆ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು. ಸರ್ಕಾರಿ ಶಾಲೆಗಳಿಂದ ಮಾತ್ರ ಭಾವನಾತ್ಮಕ ಸಂಬಂಧಗಳು ಉಳಿಯಲು ಸಾಧ್ಯ. ಬಡ ಮಕ್ಕಳ ಭವಿಷ್ಯ ಹಾಳಾಗುವ ಇಂತಹ ಯೋಜನೆಗಳು ಬೇಡ. ಬಡತನ ಕಾರಣಕ್ಕಾಗಿ ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದೆಂದರೆ ಸರ್ಕಾರಿ ಶಾಲೆಗಳನ್ನು ಬಲಪಡಿಸಿ ಶಿಕ್ಷಕರುಗಳನ್ನು ನೇಮಕ ಮಾಡುವಂತೆ ಜೆ.ಯಾದವರೆಡ್ಡಿ ಮನವಿ ಮಾಡಿದರು.

ಎಐಡಿಎಸ್‍ಓ. ರಾಜ್ಯ ಕಚೇರಿ ಕಾರ್ಯದರ್ಶಿ ಮಹಂತೇಶ್ ಮಾತನಾಡಿ ಬರ ಪೀಡಿತ ಪ್ರದೇಶ ಚಿತ್ರದುರ್ಗ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಮಾಣ ಕಡಿಮೆಯಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಸರ್ಕಾರ ಕೆಪಿಎಸ್. ಯೋಜನೆಯನ್ನು ಜಾರಿ ತರುವ ನಿರ್ಧಾರ ಕೈಬಿಡಬೇಕು. ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ 70 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿ ಕೊಠಡಿ, ಲೈಬ್ರರಿ, ಆಟದ ಮೈದಾನ, ಶೌಚಾಲಯ, ಶುದ್ದ ಕುಡಿಯುವ ನೀರು ಪೂರೈಸಿದರೆ ಮಕ್ಕಳು ಖಾಸಗಿ ಶಾಲೆಗಳತ್ತ ಆಕರ್ಷಿತರಾಗುವುದಿಲ್ಲ ಎಂದು ಹೇಳಿದರು. ಎಐಡಿಎಸ್‍ಓ. ಜಿಲ್ಲಾ ಸಂಚಾಲಕ ಕೆ.ಈರಣ್ಣ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now