Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ಮುಂದೆ ಒಎಂಆರ್ ಶೀಟ್‌ನಲ್ಲಿ ಪರೀಕ್ಷೆ ಬರೆಯುವ ಕಾಲ ಮುಗಿಯುತ್ತಾ? ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಡಿಜಿಟಲ್ ವ್ಯವಸ್ಥೆ ಜಾರಿಗೆ ಕೆಇಎ ಚಿಂತನೆ!

---Advertisement---

ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಮತ್ತು ಮೌಲ್ಯಮಾಪನದಲ್ಲಿನ ಲೋಪಗಳಿಗೆ ಕಡಿವಾಣ ಹಾಕಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಹತ್ವದ ಬದಲಾವಣೆಗೆ ಚಿಂತನೆ ನಡೆಸಿದೆ. ಪ್ರಸ್ತುತ ಒಎಂಆರ್ (OMR) ಶೀಟ್‌ಗಳ ಮೂಲಕ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಂತ ಹಂತವಾಗಿ ಕಂಪ್ಯೂಟರ್ ಆಧಾರಿತವಾಗಿ ನಡೆಸುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಈ ಮೂಲಕ ಮುಂಬರುವ ದಿನಗಳಲ್ಲಿ ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಡಿಜಿಟಲ್ ಪರೀಕ್ಷಾ ಪದ್ಧತಿ ಜಾರಿಗೆ ಬರುವ ಸಾಧ್ಯತೆ ಹೆಚ್ಚಿದೆ.

ಇತ್ತೀಚೆಗೆ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಚಿಸಿರುವ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಈ ಸಲಹೆಯನ್ನು ಮುಂದಿಟ್ಟಿದ್ದಾರೆ. ನೀಟ್ ಪರೀಕ್ಷೆಯ ಜೊತೆಗೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳನ್ನೂ ಡಿಜಿಟಲ್ ಮಾದರಿಯಲ್ಲಿ ನಡೆಸುವ ಸಾಧ್ಯತೆಗಳ ಬಗ್ಗೆ ಸಮಿತಿಯ ಗಮನ ಸೆಳೆದಿದ್ದಾರೆ.’ಡಿಜಿ ಯಾತ್ರಾ’ ಮಾದರಿಯಲ್ಲಿ ಅಭ್ಯರ್ಥಿಗಳ ಆಧಾರ್ ನೋಂದಣಿ ಆಧರಿಸಿ ಮುಖಚಹರೆ ಗುರುತಿಸುವ ವ್ಯವಸ್ಥೆ ಜಾರಿಗೊಳಿಸುವ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಯಬಹುದು ಎಂಬ ಸಲಹೆಯನ್ನೂ ನೀಡಿದ್ದಾರೆ. ಕೆಇಎ ಮೂಲಕ ನಡೆಯುವ ನೇಮಕಾತಿ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳನ್ನೂ ಹಂತ ಹಂತವಾಗಿ ಕಂಪ್ಯೂಟರ್ ಆಧಾರಿತವಾಗಿ ನಡೆಸುವ ಉದ್ದೇಶವಿದೆ.

ಕೆಇಎ ನಡೆಸಿದ ನೇಮಕಾತಿ ಪರೀಕ್ಷೆಗಳಿಗೆ ಈ ಬಾರಿ ಒಟ್ಟು 43,91,248 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರಲ್ಲಿ 30,50,996 ಮಂದಿ ಪರೀಕ್ಷೆ ಬರೆದಿದ್ದಾರೆ. ವಿವಿಧ ಪರೀಕ್ಷೆಗಳಿಗೆ ಒಟ್ಟು 17,29,318 ಒಎಂಆರ್ ಶೀಟ್‌ಗಳನ್ನು ಬಳಸಲಾಗಿದೆ.
ಒಎಂಆರ್ ಶೀಟ್‌ಗಳ ಮುದ್ರಣ, ಸಾಗಣೆ ಮತ್ತು ಮೌಲ್ಯಮಾಪನಕ್ಕೆ ಹೆಚ್ಚಿನ ವೆಚ್ಚ ತಗುಲುತ್ತದೆ. ಇದರ ಜೊತೆಗೆ ಪ್ರಶ್ನೆಪತ್ರಿಕೆ ಸೋರಿಕೆ, ಉತ್ತರ ಪತ್ರಿಕೆಗಳ ತಿದ್ದುಪಡಿ ಸೇರಿದಂತೆ ಹಲವು ಅಕ್ರಮಗಳ ಸಾಧ್ಯತೆಗಳ ಬಗ್ಗೆಯೂ ಆತಂಕವಿದೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಪರೀಕ್ಷಾ ವ್ಯವಸ್ಥೆ ಅಳವಡಿಸಿಕೊಂಡರೆ ಪ್ರಕ್ರಿಯೆಯನ್ನು ಹೆಚ್ಚು ಸುರಕ್ಷಿತ ಮತ್ತು ಪಾರದರ್ಶಕಗೊಳಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕಂಪ್ಯೂಟರ್ ಮೂಲಕ ಪರೀಕ್ಷೆ ನಡೆಸಲು ಖಾಸಗಿ ಕಂಪನಿಗಳಿಗೆ ಟೆಂಡರ್ ನೀಡುವ ಬದಲು, ದೇಶದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲಭ್ಯವಿರುವ ಕಂಪ್ಯೂಟರ್ ಸೌಲಭ್ಯಗಳನ್ನು ಬಳಸಿಕೊಳ್ಳುವ ಸಲಹೆಯನ್ನೂ ನೀಡಲಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಿಕೊಂಡರೆ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಕಂಪ್ಯೂಟರ್ ಪ್ರಯೋಗಾಲಯಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಬಳಸಿಕೊಳ್ಳಬಹುದು.ನೀಟ್ ಪರೀಕ್ಷೆಯಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರುವ ಮೊದಲು ಆಯ್ದ ರಾಜ್ಯಗಳಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸುವ ಅಗತ್ಯವಿದೆ. ಅಲ್ಲಿನ ಕಂಪ್ಯೂಟರ್‌ಗಳ ಲಭ್ಯತೆ, ಇಂಟರ್ನೆಟ್ ಸಂಪರ್ಕ, ನಿರಂತರ ವಿದ್ಯುತ್ ಪೂರೈಕೆ ಮತ್ತು ತಾಂತ್ರಿಕ ಸಿಬ್ಬಂದಿಯ ಸಾಮರ್ಥ್ಯವನ್ನು ಸಮೀಕ್ಷೆ ಮೂಲಕ ಪರಿಶೀಲಿಸಬೇಕು ಎಂಬ ಸಲಹೆಯನ್ನೂ ಕೆಇಎ ಮುಂದಿಟ್ಟಿದೆ.

ಕೆಇಎ ಮೂಲಕ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಲಕ್ಷಾಂತರ ಅಭ್ಯರ್ಥಿಗಳು ಭಾಗವಹಿಸುವುದರಿಂದ ಎಲ್ಲ ಪರೀಕ್ಷೆಗಳನ್ನೂ ಏಕಕಾಲದಲ್ಲಿ ಡಿಜಿಟಲ್ ಮಾದರಿಗೆ ಬದಲಾಯಿಸುವುದು ಸವಾಲಿನ ಕೆಲಸವಾಗಿದೆ. ಹೀಗಾಗಿ ಮೊದಲ ಹಂತದಲ್ಲಿ ಕಡಿಮೆ ಸಂಖ್ಯೆಯ ಅಭ್ಯರ್ಥಿಗಳು ಭಾಗವಹಿಸುವ ಪರೀಕ್ಷೆಗಳಲ್ಲಿ ಕಂಪ್ಯೂಟರ್ ಆಧಾರಿತ ವ್ಯವಸ್ಥೆ ಅಳವಡಿಸಲು ಚಿಂತನೆ ನಡೆದಿದೆ.ರಾಜ್ಯದಲ್ಲಿ ಸುಮಾರು 20 ಸಾವಿರ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಮೂಲಕ ಪರೀಕ್ಷೆ ನಡೆಸುವ ಸಾಮರ್ಥ್ಯದ ವ್ಯವಸ್ಥೆಯಿದೆ ಎಂದು ಕೆಇಎ ಮೂಲಗಳು ತಿಳಿಸಿವೆ. ಲಭ್ಯವಿರುವ ಸಂಪನ್ಮೂಲಗಳು ಮತ್ತು ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ ಹಂತ ಹಂತವಾಗಿ ಈ ವ್ಯವಸ್ಥೆ ಜಾರಿಗೆ ತರುವ ಸಾಧ್ಯತೆಯಿದೆ.

ಡಿಜಿಟಲ್ ಪರೀಕ್ಷೆಯಿಂದ ಏನೆಲ್ಲ ಅನುಕೂಲ?
ಕಂಪ್ಯೂಟರ್ ಆಧಾರಿತ ಪರೀಕ್ಷೆ ಜಾರಿಯಾದರೆ ಒಎಂಆರ್ ಶೀಟ್‌ಗಳ ಮುದ್ರಣ ಮತ್ತು ಸಾಗಣೆ ವೆಚ್ಚ ಕಡಿಮೆಯಾಗಲಿದೆ. ಕಾಗದರಹಿತ ಪರೀಕ್ಷೆ ನಡೆಸಲು ಸಾಧ್ಯವಾಗುವುದರ ಜೊತೆಗೆ ಮೌಲ್ಯಮಾಪನ ಪ್ರಕ್ರಿಯೆಯೂ ವೇಗವಾಗಿ ಪೂರ್ಣಗೊಳ್ಳಬಹುದು. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಉತ್ತರ ಪತ್ರಿಕೆಗಳ ನಿರ್ವಹಣೆಯಲ್ಲಿನ ಲೋಪಗಳನ್ನು ಕಡಿಮೆ ಮಾಡಲು ಸಹಕಾರಿಯಾಗಬಹುದು.

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಡಿಜಿಟಲ್ ವ್ಯವಸ್ಥೆಯೊಂದೇ ಸಾಕಾಗುವುದಿಲ್ಲ. ಸೈಬರ್ ಭದ್ರತೆ, ಸರ್ವರ್ ಸಾಮರ್ಥ್ಯ, ತಾಂತ್ರಿಕ ದೋಷಗಳು ಮತ್ತು ಪರೀಕ್ಷಾ ಕೇಂದ್ರಗಳ ಸಿದ್ಧತೆಯ ಬಗ್ಗೆಯೂ ವಿಶೇಷ ಗಮನ ಹರಿಸಬೇಕಾಗುತ್ತದೆ.ಈ ಕುರಿತು ಪ್ರತಿಕ್ರಿಯಿಸಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ನೀಟ್ ಪರೀಕ್ಷೆಯನ್ನು ಡಿಜಿಟಲ್ ಮೂಲಕ ನಡೆಸುವಂತೆ ಸಲಹೆ ನೀಡಲಾಗಿದೆ. ಕೆಇಎ ಮೂಲಕ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಂತ ಹಂತವಾಗಿ ಕಂಪ್ಯೂಟರ್ ಆಧಾರಿತವಾಗಿ ನಡೆಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಸಲಹೆ-ಸೂಚನೆ ಮತ್ತು ಸಂಪನ್ಮೂಲಗಳ ಲಭ್ಯತೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ಇದು ಪ್ರಸ್ತಾವನೆ ಮತ್ತು ಚಿಂತನೆಯ ಹಂತದಲ್ಲಿದ್ದು, ಸರ್ಕಾರದ ಅಂತಿಮ ನಿರ್ಧಾರದ ಬಳಿಕವೇ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ಜಾರಿಗೆ ಬರಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now