ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗುತ್ತಿರುವ ಹಿನ್ನೆಲೆ ಹೈಕೋರ್ಟ್ ವರದಿ ಕೇಳಿದೆ. ಮೂರು ವಾರಗಳಲ್ಲಿ ಈ ಸಂಬಂಧ ವರದಿ ನೀಡಬೇಕೆಂದು ಸೂಚಿಸಿದೆ. ನಿವೃತ್ತ ನ್ಯಾಯಮೂರ್ತಿ ಎ ಎನ್ ವೇಣುಗೋಪಾಲಗೌಡ ನೇತೃತ್ವದ ಉನ್ನತಮಟ್ಟದ ಸಮಿತಿಗೆ ಖಡಕ್ ಸೂಚನೆ ನೀಡಿದೆ.
ಹೈದ್ರಾಬಾದ್ ಕರ್ನಾಟಕ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿ ಕಾಡುತ್ತಿದೆ ಎಂದು 2011ರಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಪೀಠವೂ ವರದಿ ನೀಡಲು ಸಮಯ ನೀಡಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲೆ ಮೈತ್ರೇಯಿ ಕೃಷ್ಣನ್ ಅವರು `ಕಳೆದ ವಿಚಾರಣೆ ವೇಳೆ ನ್ಯಾಯಾಲಯ ಸಮಿತಿಗೆ ವರದಿ ಸಲ್ಲಿಸಲು ಸೂಚನೆ ನೀಡಿತ್ತು. ಆ ವರದಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು. ಅದನ್ನು ಪರಿಗಣಿಸಿದ ಪೀಠವು ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಕೇಂದ್ರ ಸರ್ಕಾರದ ಪರ ವಕೀಲ ಉನ್ನಿಕೃಷ್ಣನ್ ಅವರು `ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದು ವೇಳೆ ಉನ್ನತ ಮಟ್ಟದ ಸಮಿತಿ ಆ ಕುರಿತು ಶಿಫಾರಸ್ಸು ಮಾಡಿದರೆ, ಅದಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.