ಚಿತ್ರದುರ್ಗ, (ಏ.28): ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ಗ್ರಾಮ ಚೈತನ್ಯ ಕಾರ್ಯಾಲಯ ಆರಂಭಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.
ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ನೂತನ ಕಾರ್ಯಾಲಯ ಉದ್ಘಾಟಿಸಿ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು 24 × 7 ಕಾರ್ಯಾಲಯ ಕಾರ್ಯನಿರ್ವಹಿಸಲಿದ್ದು, ಕೆಲವು ತರಬೇತಿ ಕಾರ್ಯಾಗಾರಗಳನ್ನು ನಡೆಸಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಲಾಗುವುದು. ಸಣ್ಣಪುಟ್ಟ ಸಮಸ್ಯೆಗಳನ್ನೊತ್ತು ಇಲ್ಲಿಗೆ ಬರುವ ಸಾರ್ವಜನಿಕರಿಗೂ ಸ್ಪಂದಿಸಲಾಗುವುದು.
ಚಿತ್ರದುರ್ಗ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಿ ಹಳ್ಳಿಗಳಲ್ಲಿನ ಜನರಿಗೆ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸಲಿಕ್ಕಾಗಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಹೂಡಲು ಕಂದಾಯ ಸಚಿವರನ್ನು ಮನವಿ ಮಾಡಲಾಗಿದ್ದು, ಚಳ್ಳಕೆರೆ ಮತ್ತು ಮೊಳಕಾಲ್ಮುರು ಭಾಗದ ಹಳ್ಳಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಜಿಲ್ಲೆಯಲ್ಲಿ ಭೂಮಿ ಕೊಡಿಸಲಾಗುವುದು. ಹಳ್ಳಿಗಾಡಿನಲ್ಲಿ ನಡೆಯುವ ಕಾಮಗಾರಿಗಳಿಗೆ ಚೈತನ್ಯ ತುಂಬುವುದು ಗ್ರಾಮ ಚೈತನ್ಯಕಾರ್ಯಾಲಯದ ಉದ್ದೇಶ. ಇದರ ಮೂಲಕ ಹಲವಾರು ಕಾಮಗಾರಿಗಳಿಗೆ ಚುರುಕು ಮುಟ್ಟಿಸಲಾಗುವುದು. ಜಿಲ್ಲೆಯ ಎಲ್ಲಾ ಕ್ರೀಡಾ ಸಂಘ ಸಂಸ್ಥೆಗಳವರನ್ನು ಒಂದೆ ವೇದಿಕೆಯಲ್ಲಿ ಸಭೆ ಕರೆದು ಚರ್ಚಿಸಲಾಗುವುದು.
ಅಥ್ಲೆಟಿಕ್ಸ್ ಕ್ರೀಡಾಪಟುಗಳು ಜಿಲ್ಲೆಯಲ್ಲಿ ಸಾಕಷ್ಟಿರುವುದರಿಂದ ಖೇಲೋ ಇಂಡಿಯಾವನ್ನು ಜಿಲ್ಲೆಗೆ ತರುವ ಚಿಂತನೆ ನಡೆಸಲಾಗುತ್ತಿದೆ. ದಾವಣಗೆರೆ, ಬೆಂಗಳೂರಿನಲ್ಲಿ ಈಗಾಗಲೇ ಕಾರ್ಯಾಲಯ ಆರಂಭಿಸಿದ್ದು, ಕಳೆದ ವರ್ಷ ಜಿಲ್ಲೆಯಲ್ಲಿ ಏನು ಕೆಲಸ ಆಗಿಲ್ಲ. ಕಾಮಗಾರಿಗಳು ವಿಳಂಭವಾದರೆ ಜಿಲ್ಲೆಯ ಆರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೆ ಉತ್ತರಿಸಬೇಕಾಗುತ್ತದೆ. ಕೆಲವು ದಿನಗಳ ಹಿಂದೆ ಚಿತ್ರದುರ್ಗದಲ್ಲಿ ನಡೆದ ಅಂತ್ಯೋದಯ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಕೆ.ಎಸ್.ನವೀನ್ ಸಂತಸ ವ್ಯಕ್ತಪಡಿಸಿದರು.