ಚಿತ್ರದುರ್ಗ.ಜೂ.04: ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ ಶಾಖಾ ಕಾಲುವೆಗೆ ಭಗೀರಥ ಮಹರ್ಷಿ ಹೆಸರು ನಾಮಕರಣ ಮಾಡಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹೊಸದುರ್ಗದ ಬ್ರಹ್ಮವಿದ್ಯಾನಗರ ಭಗೀರಥ ಪೀಠ ಮಹಾಸಂಸ್ಥಾನ ಮಠದ ಆವರಣದಲ್ಲಿ ಶನಿವಾರ ಆಯೋಜಿಸಲಾದ ರಾಜ್ಯಮಟ್ಟದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪುರುಷೋತ್ತಮಾನಂದಪುರಿ ಸ್ವಾಮೀಜಿ ಬೇಡಿಕೆಯಂತೆ ಮಠದ ಆವರಣದಲ್ಲಿ ಶ್ರೀ ಭಗೀರಥ ಮಹರ್ಷಿ ಏಕಶಿಲಾ ಮೂರ್ತಿ ಸ್ಥಾಪನೆ, ಪರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡುವುದು, ಪರಿಶಿಷ್ಟ ಪಂಗಡದ ಮೀಸಲಾತಿ ಕಲ್ಪಿಸಿಕೊಡುವುದು ಸೇರಿ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಉಪ್ಪಾರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಶ್ರೀ ಭಗೀರಥ ಮಹರ್ಷಿ ಇತಿಹಾಸ ಅತ್ಯಂತ ಅದ್ಭುತವಾಗಿದೆ. ಉಪ್ಪಾರ ಜನಾಂಗದಲ್ಲಿ ಸಾಧಕರ ಸಂಖ್ಯೆ ಹೆಚ್ಚಾಗಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ ನವಭಾರತ ನಿರ್ಮಾಣ ಆಗಬೇಕು.
ಬಿ.ಎಸ್.ಯಡಿಯೂರಪ್ಪ ಅವರು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಭಗೀರಥ ಮಠದ ಅಭಿವೃದ್ಧಿಗೆ 4 ಕೋಟಿ ಅನುದಾನ ಕೊಡಿಸಿದ್ದೇನೆ. ನಾನು ಈಗ ಮತ್ತೆ 5 ಕೋಟಿ ಬಿಡುಗಡೆ ಮಾಡಿ ಈ ಸಮಾರಂಭಕ್ಕೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸ್ಮರಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ ಹಿಂದುಳಿದಿರುವ ಉಪ್ಪಾರ ಸಮಾಜದ ಅಭಿವೃದ್ಧಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಬೇಕು. ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಬೇಕು. ಮಠದಕ್ಕೆ ನೀಡಿದ 150 ಎಕರೆ ಜಮೀನನ್ನು ಗುತ್ತಿಗೆ 2011ಕ್ಕೆ ಮುಕ್ತಾಯವಾಗಿದೆ. ಜಮೀನನ್ನು ಭಗೀರಥ ಪೀಠದ ಹೆಸರಿಗೆ ಶಾಶ್ವತವಾಗಿ ಮಂಜೂರು ಮಾಡಿಕೊಡಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.
ಬಿಹಾರ ರಾಜ್ಯದ ಉಪಮುಖ್ಯಮಂತ್ರಿ ರೇಣುಕಾದೇವಿ, ಕೇಂದ್ರ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್, ಡಾ.ಸಿ.ಎನ್. ಮಂಜುನಾಥ್ ಅವರಿಗೆ ಭಗೀರಥ ರತ್ನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್,
ಶಾಸಕರಾದ ಗೂಳಿಹಟ್ಟಿ ಡಿ.ಶೇಖರ್, ಎಮ್ .ಚಂದ್ರಪ್ಪ ಬೆಳ್ಳಿ ಪ್ರಕಾಶ್ ಕೆ.ಎಸ್.ನವೀನ್, ಜಿ.ಹೆಚ್.ತಿಪ್ಪಾರೆಡ್ಡಿ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ, ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ಡಾ.ರವೀಂದ್ರ ಹಾಗೂ ಉಪ್ಪಾರ ಸಮಾಜದ ಮುಖಂಡರು ಹಾಜರಿದ್ದರು.