ಹಿರಿಯ ಟಿಎಂಸಿ ನಾಯಕ ಯಶವಂತ್ ಸಿನ್ಹಾ ಅವರನ್ನು 2022 ರ ಅಧ್ಯಕ್ಷೀಯ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಹಿರಿಯ ರಾಜಕಾರಣಿ ಸಿನ್ಹಾ ಅವರು ಈ ಹಿಂದೆ ಟಿಎಂಸಿಗೆ ರಾಜೀನಾಮೆ ನೀಡಿದ್ದರು.
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗುವುದರಿಂದ ಹಿಂದೆ ಸರಿದ ಬೆನ್ನಲ್ಲೇ ಈಗ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಮತ್ತು ಮಹಾತ್ಮ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರು ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಪ್ರಸ್ತಾಪವನ್ನು ಸೋಮವಾರ ತಿರಸ್ಕರಿಸಿದ್ದಾರೆ.
ಈ ಹಿಂದೆ ವಿಪಕ್ಷಗಳ ಜಂಟಿ ರಾಷ್ಟ್ರಪತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಗೋಪಾಲಕೃಷ್ಣ ಗಾಂಧಿ ಹೆಸರು ಬಲವಾಗಿ ಕೇಳಿ ಬಂದಿತ್ತು. ಆದರೆ ಅವರು ಇದೀಗ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಇದೇ ರೀತಿ ಫಾರೂಕ್ ಅಬ್ದುಲ್ಲಾ ಮತ್ತು ಶರದ್ ಪವಾರ್ ಕೂಡ ಈ ಹಿಂದೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.