ಹುಬ್ಬಳ್ಳಿ: ಕ್ಯಾಂಡಲ್ ತಯಾರಿಸುವ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಕಾರ್ಖಾನೆಯ ಒಂಭತ್ತು ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ತಾರಿಹಾಳದಲ್ಲಿ ನಡೆದಿದೆ. ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ.
ಕಾರ್ಖಾನೆಯಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲೆ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೂ ಬೆಂಕಿ ತಾಗಿದೆ. ಇದರ ಪರಿಣಾಮ ಕಾರ್ಮಿಕರ ದೇಹ ಅರ್ಧಂಬರ್ಧ ಸುಟ್ಟಿದೆ. ತಕ್ಷಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳು ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಕಾರ್ಖಾನೆಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಕಾರ್ಮಿಕರ ರಕ್ಷಣೆಗೆ ಮುಂದಾಗಿದೆ. ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲಿಯೇ ಇದ್ದು, ಪರಿಶೀಲನೆ ನಡೆಸುತ್ತಿದ್ದಾರೆ.