ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸರ್ವಪಕ್ಷ ಸಭೆ ಕರೆದಿದ್ದರು. ಸರ್ವಪಕ್ಷ ಸಭೆಯಲ್ಲಿ ಈ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ನಾಳೆಯೇ ಸಂಪುಟ ಸಭೆ ಕರೆದು ಅಂತಿಮ ಮುದ್ರೆ ಒತ್ತಲಿದ್ದಾರೆ.
ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮೊನ್ನೆ ಹೇಳಿದಂತೆ ಇಂದು ಸರ್ವಪಕ್ಷ ಸಭೆ ಕರೆದು ಈ ಬಗ್ಗೆ ಚರ್ಚಿಸಿದ್ದೇವೆ. ಬಹಳ ವರ್ಷದ ಬೇಡಿಕೆ ಇದಾಗಿದೆ. ಸಂವಿಧಾನದಲ್ಲಿ ಹೇಳಿರುವಂತೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ನಿರ್ಧರಿಸಿದ್ದೇವೆ. ನಾಳೆಯೇ ಸರ್ಕಾರದಿಂದ ಅಧಿಕೃತ ಮುದ್ರೆ ಒತ್ತುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಎಸ್ಸಿ ಮತ್ತು ಎಸ್ಟಿ ಸಮುದಾಯದ ಒಳಗಿರುವ ಕೆಲ ಸಮುದಾಯಗಳಿಗೂ ನ್ಯಾಯ ಸಿಕ್ಕಿಲ್ಲ. ಸಮಗ್ರ ಮೀಸಲಾತಿ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಲ್ಲರ ವಿಶ್ವಾಸದ ಮೇರೆಗೆ ತೀರ್ಮಾನ ಕೈಗೊಳ್ಳುತ್ತೇವೆ. ಸದ್ಯ ಎಸ್ಸಿ ಮೀಸಲಾತಿಯನ್ನು 15ರಿಂದ 17ಕ್ಕೆ ಹೆಚ್ಚಿಸಲಾಗಿದೆ. ಎಸ್ಟಿ ಮೀಲಸಾತಿಯನ್ನು 3ರಿಂದ 7ಕ್ಕೆ ಹೆಚ್ಚಳ ಮಾಡಲಾಗಿದೆ ಎಂದಿದ್ದಾರೆ.