ವರದಿ ಮತ್ತು ಫೋಟೋ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ: ದೈಹಿಕ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟಂತೆ ಮಾನಸಿಕ ಆರೋಗ್ಯಕ್ಕೂ ಪ್ರಾಧಾನ್ಯತೆ ನೀಡಿದಾಗ ಮಾತ್ರ ಪ್ರತಿಯೊಬ್ಬರು ಆರೋಗ್ಯದಿಂದಿರಲು ಸಾಧ್ಯ ಎಂದು ಡಾ.ರೂಪ ಕರೆ ನೀಡಿದರು.
ನೆಹರು ಯುವ ಕೇಂದ್ರ, ಆದರ್ಶ ಯುವಕ ಸಂಘ, ರೋಟರಿ ಕ್ಲಬ್ ಚಿನ್ಮುಲಾದ್ರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ದೈಹಿಕ ಆರೋಗ್ಯದ ಕಡೆ ಎಲ್ಲರೂ ಗಮನ ಹರಿಸುವುದು ಸಹಜ. ಆದರೆ ಮಾನಸಿಕವಾಗಿ ಆರೋಗ್ಯ ಸರಿಯಾಗಿರದಿದ್ದರೆ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ಕೊಡಬೇಕು ಎಂದು ಹೇಳಿದರು.
ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ ಮಾತನಾಡಿ ಶಾರೀರಿಕ, ಮಾನಸಿಕ, ಸಾಮಾಜಿಕವಾಗಿ ಸದೃಡರಾಗಿರುವುದೇ ನಿಜವಾದ ಆರೋಗ್ಯ. 1992 ರಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆರಂಭಿಸಲಾಯಿತು. ವಿಶ್ವದಲ್ಲಿ ಜನರು ಖಿನ್ನತೆಯಿಂದ ಬಳಲಿ ಆತ್ಮಹತ್ಯೆ ಮಾಡಿಕೊಳ್ಳುವಂತ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಮಹತ್ವ. ವಿಶ್ವ ಆರೋಗ್ಯ ಸಂಸ್ಥೆ ಅಂಕಿ ಅಂಶಗಳ ಪ್ರಕಾರ ಪ್ರತಿ ವರ್ಷ ಸುಮಾರು ಎಂಟು ಲಕ್ಷ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಾನಸಿಕವಾಗಿ ಬಳಲುತ್ತಿರುವವರಿಗೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಕ್ಕಾಗ ದೊಡ್ಡಮಟ್ಟದಲ್ಲಿ ಆತ್ಮಹತ್ಯೆಯನ್ನು ತಡೆಗಟ್ಟಬಹುದು ಎಂದರು.
ಜಿಲ್ಲಾ ಕಾರಾಗೃಹ ಅಧೀಕ್ಷಕಿ ಮಹಾದೇವಿ ಮರಕಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷ ರೋ.ಈ.ಅರುಣ್‍ಕುಮಾರ್, ಕಾರ್ಯದರ್ಶಿ ಶ್ರೀನಿವಾಸ್, ರೆಡ್‍ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಮಜಹರ್‍ವುಲ್ಲಾ, ಆದರ್ಶ ಯುವಕ ಸಂಘದ ಕಾರ್ಯದರ್ಶಿ ಓಂಕಾರಮ್ಮ, ಆರೋಗ್ಯ ಇಲಾಖೆಯ ವೆಂಕಟೇಶ್, ಬಂಧಿಖಾನೆಯ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.