ಕುರುಗೋಡು. ನ.19
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗಾಗಿ ಅಭ್ಯರ್ಥಿಗಳ ಆಯ್ಕೆಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ರಾಜ್ಯದ ಕಾಂಗ್ರೆಸ್ ಆಕಾಂಕ್ಷಿಗಳ ಅರ್ಜಿಗೆ ಅವಕಾಶ ಮಾಡಿಕೊಟ್ಟಿದೆ.
ನ.5ರಿಂದ 15ವರೆಗೆ ಕಾಂಗ್ರೆಸ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಕೋರಿತ್ತು. ಆದರೆ, ಈಗ ಇನ್ನೂ ಕೆಲ ದಿನದವರೆಗೆ ಅರ್ಜಿಗಳನ್ನು ಸಲ್ಲಿಸಲು ಕಾಲವಕಾಶ ಮಾಡಿದೆ.
ಕಂಪ್ಲಿ ವಿಧಾನಸಭಾ ಕ್ಷೇತ್ರ ಸೇರಿ ರಾಜ್ಯದ ನಾನಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರು ಇದ್ದರೂ, ಕೆಲ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸುತ್ತಿರುವುದು ಕಾಂಗ್ರೆಸ್ಗೆ ಕಬ್ಬಿಣದ ಕಡಲೆಯಂತಾಗಿದೆ.
ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ ಹಾಲಿ ಶಾಸಕ ಜೆ.ಎನ್.ಗಣೇಶ್ ಅವರು ಅಧಿಕಾರದಲ್ಲಿದ್ದಾರೆ. ಆದರೆ, ಹಾಲಿ ಶಾಸಕರು ಅಧಿಕಾರದಲ್ಲಿರುವಾಗಲೇ ಕೆಲ ಕಾಂಗ್ರೆಸ್ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸುವ ಮೂಲಕ ಹಾಲಿ ಶಾಸಕರಿಗೆ ಟಕ್ಕರ್ ಕೊಡುವುದಕ್ಕೆ ಸಜ್ಜಾಗಿದ್ದಾರೆ.
ಹೌದು: ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಾಲಿ ಶಾಸಕ ಹಾಗೂ ಆಕಾಂಕ್ಷಿಗಳ ನಡುವೆ ಟಿಕೆಟ್ಗಾಗಿ ಜಟಾಪಟಿ ಶುರುವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತಿನ ಸಿಪಾಯಿಯಂತೆ ದುಡಿಯುತ್ತಿರುವ ಕೆಪಿಸಿಸಿ ಎಸ್.ಟಿ ಮೋರ್ಚದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಗಂಗಾವತಿಯ ರಾಜು ನಾಯಕ ಅವರು ಇತ್ತೀಚೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿ ಬೆಂಗಳೂರಿನ ಕೆಪಿಸಿಸಿ ಕಛೇರಿಗೆ ತೆರಳಿ, ನೋಂದಣಿ ಶುಲ್ಕ ಹಾಗೂ ಒಂದು ಲಕ್ಷ ರೂ.ಗಳ ಡಿ.ಡಿ ಯೊಂದಿಗೆ ಅರ್ಜಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೋಳಿ ಆಪ್ತರಾಗಿರುವ ರಾಜು ನಾಯಕ ಅವರು ಕಾಂಗ್ರೆಸ್ನ ಹಲವು ಮುಖಂಡರ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದ ಜನರ ಸಂಪರ್ಕದಲ್ಲಿದ್ದು, ಕಳೆದ ಬಾರಿ ತಪ್ಪಿದ್ದ ಟಿಕೆಟ್ ಅನ್ನು ಈ ಬಾರಿಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಪಡೆದೇ ತೀರಬೇಕೆಂಬ ಹಂಬಲದಿದ್ದಾರೆ.
ಹಾಲಿ ಶಾಸಕರಿಂದ ದೂರ ಉಳಿದ ಕಾಂಗ್ರೆಸ್ ಮುಖಂಡರು ಹಾಗೂ ಕೆಲ ಕಾರ್ಯಕರ್ತರು ಹಾಲಿ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ನಾನಾ ಕಸರತ್ತು ನಡೆಸಿದ್ದಾರೆ ಎನ್ನಲಾಗುತ್ತಿದೆ.
ಕಂಪ್ಲಿ ಕ್ಷೇತ್ರದಿಂದ ಕೆಪಿಸಿಸಿಗೆ ಕೆಲ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುವುದು ಹಾಲಿ ಶಾಸಕರಿಗೆ ನುಂಗಲಾರದ ತುಪ್ಪವಾಗಿದೆ. ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಇನ್ನೂ ಮೂರ್ನಾಲ್ಕು ತಿಂಗಳು ಇದ್ದು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ನಾಯಕರು ಯಾರಿಗೆ ಮಣೆ ಹಾಕುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಆದರೆ, ಈಗಲೇ ಕುರುಗೋಡು – ಕಂಪ್ಲಿ ವಿಧಾನಸಭಾ ಕ್ಷೇತ್ರದ ರಾಜ್ಯ ರಾಜಕೀಯ ಗರಿಗೆದರಿದ್ದು, ಕ್ಷೇತ್ರದ ಜನರ ವಿಶ್ವಾಸ ಗಳಿಸಲು ನಾಮುಂದು ತಾಮುಂದು ಎನ್ನುವಂತಾಗಿದೆ.
ಹೇಳಿಕೆ :
ಇತ್ತೀಚೆಗೆ ಬೆಂಗಳೂರಿನ ಕೆಪಿಸಿಸಿ ಕಛೇರಿಗೆ ತೆರಳಿ, ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ ನಂತರ ರಾಜುನಾಯಕ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಸಿಗಬೇಕಾಗಿತ್ತು. ಬೇರೆ ಕಾರಣದಿಂದಾಗಿ ಶಾಸಕ ಗಣೇಶ್ ಅವರಿಗೆ ಟಿಕೆಟ್ ಸಿಕ್ಕಿದೆ. ಆದರೆ, ಈ ಬಾರಿ ಕಾಂಗ್ರೆಸ್ನ ಪ್ರಬಲ ಆಕಾಂಕ್ಷಿಯಾಗಿದ್ದು, ಟಿಕೆಟ್ ಸಿಗುವ ವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಈ ಸಲದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತೆಗೆದುಕೊಳ್ಳುವುದು ಶತಸಿದ್ಧ. ಕುರುಗೋಡು – ಕಂಪ್ಲಿ ಕ್ಷೇತ್ರದ ಜನರು ಹಾಗೂ ಕಾಂಗ್ರೆಸ್ ಮುಖಂಡರ ಹಾಗೂ ನಾಯಕರ ಬೆಂಬಲ ಸಿಕ್ಕಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ಟಿಕೆಟ್ ಕೈ ತಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.