ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ (ನ.19) : ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಪ್ರಸ್ತುತ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಇದರಲ್ಲಿ ಮುಖ್ಯವಾಗಿ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ ವಿವಿಧ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಿ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಆದೇಶ ಹೊರಡಿಸಿದ್ದಾರೆ.
ನೇಮಿಸಲಾಗಿರುವ ನೋಡಲ್ ಅಧಿಕಾರಿಗಳ ವಿವರ ಇಂತಿದೆ.
ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಜೆಎಂಐಟಿ ಇಂಜಿನಿಯರಿಂಗ್ ಕಾಲೇಜು, ಬಸವೇಶ್ವರ ವೈದ್ಯಕೀಯ ಕಾಲೇಜು, ಸರ್ಕಾರಿ ಶಿಕ್ಷಕರ ಮಹಾವಿದ್ಯಾಲಯ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಕಾಲೇಜುಗಳ ಪ್ರಾಂಶುಪಾಲರು, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು. ಇವರು ತಮ್ಮ ವ್ಯಾಪ್ತಿಯ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ಅದೇ ರೀತಿ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪ.ವರ್ಗಗಳ ಕಲ್ಯಾಣಾಧಿಕಾರಿಗಳು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದ್ದು, ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲ ವಸತಿ ನಿಲಯಗಳಲ್ಲಿನ ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ನಿರ್ದೇಶನ ನೀಡಲಾಗಿದೆ.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲು ಉದ್ದೇಶಿಸಲಾಗಿದ್ದು, ನೋಡಲ್ ಅಧಿಕಾರಿಗಳು, ತಮ್ಮ ವ್ಯಾಪ್ತಿಯ ಎಲ್ಲ ಕಾಲೇಜು ಪ್ರಾಂಶುಪಾಲರೊಂದಿಗೆ ನಿಯಮಿತವಾಗಿ ಸಭೆ ನಡೆಸಿ, ಮತದಾರರ ನೊಂದಣಿಗೆ ಕ್ರಮ ವಹಿಸಬೇಕು. ಕಾಲೇಜು, ಹಾಸ್ಟೆಲ್‍ಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ, ಇಎಲ್‍ಸಿ ಕ್ಲಬ್‍ಗಳ ಮೂಲಕ ಯುವ ಮತ್ತು ಭವಿಷ್ಯದ ಮತದಾರರಿಗೆ ಜಾಗೃತಿ ಮೂಡಿಸಿ, ಅರ್ಹ ಮತದಾರರು ಯಾರೂ ಕೂಡ ಹೊರಗುಳಿಯದಂತೆ ವೋಟರ್ ಆ್ಯಪ್ ಮೂಲಕ ಸೇರ್ಪಡೆಗೆ ಕ್ರಮ ವಹಿಸಬೇಕು, ಕಾಲೇಜು ಇಎಲ್‍ಸಿ ಕೇಂದ್ರಗಳು ತಮ್ಮ ಹಂತದಲ್ಲಿ ನಿರ್ವಹಿಸುವ ಕಾರ್ಯ ಚಟುವಟಿಕೆಗಳನ್ನು ಫೋಟೋ, ವಿಡಿಯೋ ಮೂಲಕ ದಾಖಲೆಗೊಳಿಸಿ, ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.