ನವದೆಹಲಿ : ಕೇಂದ್ರದ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆ ರಾಜ್ಯಸಭೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಆಡಳಿತಾರೂಢ ಬಿಜೆಪಿ ಸದಸ್ಯರು ಖರ್ಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಆದರೆ, ಕಾಂಗ್ರೆಸ್ ಅಧ್ಯಕ್ಷರು ಇದಕ್ಕೆ ನಿರಾಕರಿಸಿದ್ದರಿಂದ ಸದನದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಈ ಬೆಳವಣಿಗೆಗಳ ಬಗ್ಗೆ ಸಭಾಪತಿ ಜಗದೀಪ್ ಧನಖಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ಯಾತ್ರೆ’ಯನ್ನು ‘ಭಾರತ್ ತೋಡೋ ಯಾತ್ರೆ’ ಎಂದು ಕರೆದಿರುವ ಬಿಜೆಪಿ ನಾಯಕರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜಸ್ಥಾನದ ಅಲ್ವಾರ್‌ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದರು. ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರಂತಹ ನಾಯಕರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆದರೆ ಬಿಜೆಪಿಯವರ ಮನೆಯಲ್ಲಿ ದೇಶಕ್ಕಾಗಿ ಒಂದು ನಾಯಿಯಾದರೂ ಸತ್ತಿದೆಯಾ ? ಎಂದು ಪ್ರಶ್ನಿಸಿದ್ದರು.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಮಂಗಳವಾರ ಸಂಸತ್ ಕಲಾಪ ಆರಂಭವಾದಾಗ ಖರ್ಗೆ ಅವರ ಹೇಳಿಕೆಯನ್ನು ಪ್ರಸ್ತಾಪಿಸಿ ಆಡಳಿತ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಖರ್ಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಲೋಕಸಭೆಯಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ನಡೆಯಿತು.
ನಾವು ಮಕ್ಕಳೇ ?
ರಾಜ್ಯಸಭೆಯಲ್ಲಿ ಖರ್ಗೆ ಅವರ ಹೇಳಿಕೆಗೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸಭಾಪತಿ ಜಗದೀಪ್ ಧನಖಡ್ ಆಕ್ರೋಶ ವ್ಯಕ್ತಪಡಿಸಿದರು. ಸಂಸತ್ತಿನ ಹೊರಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಲಾಗುತ್ತಿದೆ. ದೇಶದ 135 ಕೋಟಿ ಜನರು ನಮ್ಮನ್ನು ನೋಡಿ ನಗುತ್ತಿದ್ದಾರೆ. ಸದನದಲ್ಲಿ ಇಂತಹ ನಡವಳಿಕೆ ನಮಗೆ ಕೆಟ್ಟ ಹೆಸರು ತರುತ್ತದೆ. ಸದನದಲ್ಲಿ ಕಲಾಪ ನಡೆಯುವ ರೀತಿಯ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಿಷ್ಠ ಸಭಾಪತಿಯವರ ಸೂಚನೆಯನ್ನೂ ಪಾಲನೆ ಮಾಡುತ್ತಿಲ್ಲ. ಎಂತಹ ಶೋಚನೀಯ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದ್ದಾರೆ. ನಾವೇನಾದರೂ ಮಕ್ಕಳಾ?’ ಎಂದು ರಾಜ್ಯಸಭಾ ಸಭಾಪತಿ ಜಗದೀಪ್ ದಂಖಡ್ ಅಸಹನೆ ವ್ಯಕ್ತಪಡಿಸಿದ್ದಾರೆ.