ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ,(ಡಿ.29) : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಜ. 8 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಎಸ್.ಸಿ. ಎಸ್.ಟಿ. ಬೃಹತ್ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಸಮಾವೇಶದ ಉಸ್ತುವಾರಿ ಮಾಜಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಸಮಾವೇಶಕ್ಕೆ ಆಗಮಿಸಲಿದ್ದಾರೆ.
ಡಾ.ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ಉಗ್ರಪ್ಪ, ಸತೀಶ್ ಜಾರಕಿಹೊಳಿ ಇನ್ನು ಅನೇಕರು ಈಗಾಗಲೆ ಚಿತ್ರದುರ್ಗದಲ್ಲಿ ಸಮಾವೇಶ ನಡೆಯುವ ಸ್ಥಳ ವೀಕ್ಷಣೆ ಮಾಡಿ ಹೋಗಿದ್ದಾರೆ. ಎ.ಐ.ಸಿ.ಸಿ.ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶ ಉದ್ಘಾಟಿಸಲಿದ್ದು, ರಾಹುಲ್‍ಗಾಂಧಿ, ಪ್ರಿಯಾಂಕಗಾಂಧಿ, ಸೋನಿಯಾಗಾಂಧಿ ಈ ಮೂವರಲ್ಲಿ ಯಾರಾದರೂ ಒಬ್ಬರು ಬರಬಹುದು. ಸುಮಾರು ಐದು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಎಸ್ಸಿ, ಎಸ್ಟಿ.ಗಳ ಸಮಸ್ಯೆ, ನೂನ್ಯತೆಗಳನ್ನು ಸರಿಪಡಿಸಿ ನ್ಯಾಯಯುತವಾದ ಸೌಲತ್ತುಗಳನ್ನು ನೀಡಲು ಹತ್ತು ಅಂಶಗಳ ಕಾರ್ಯಕ್ರಮಗಳನ್ನು ಸಮಾವೇಶದಲ್ಲಿ ಘೋಷಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಸಮಾವೇಶ ನಡೆಸುವುದು ಕಷ್ಟವಾಗುತ್ತದೆ ಎನ್ನುವುದನ್ನು ಅರಿತು ಮಧ್ಯಕರ್ನಾಟಕದ ಚಿತ್ರದುರ್ಗದಲ್ಲಿ ನಡೆಸಲು ನಾಯಕರುಗಳು ತೀರ್ಮಾನಿಸಿದ್ದಾರೆ. ಉತ್ತರ ಕರ್ನಾಟಕ, ಮಧ್ಯಕರ್ನಾಟಕ, ಕರಾವಳಿ ಭಾಗಗಳಿಂದ ಕಾರ್ಯಕರ್ತರು ಬರಲು ಸುಲಭವಾಗುತ್ತದೆ. ಪರಿಶಿಷ್ಟ ಜಾತಿಯಲ್ಲಿನ ನೂರ ಒಂದು ಜಾತಿ ಹಾಗೂ ಪರಿಶಿಷ್ಟ ವರ್ಗದಲ್ಲಿನ 52 ಜಾತಿಗಳನ್ನು ಒಡೆದಾಳಬಾರದು ಎನ್ನುವ ಉದ್ದೇಶವಿಟ್ಟುಕೊಂಡು ಒಂದೆಡೆ ಸೇರಿಸುವುದು ಐಕ್ಯತಾ ಸಮಾವೇಶದ ಉದ್ದೇಶ. ನಾವುಗಳು ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧಿಸುತ್ತಿಲ್ಲ. ಪರಿಶಿಷ್ಟ ಜಾತಿಯಲ್ಲಿನ ಎಲ್ಲಾ ಒಳಜಾತಿಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಸಿಗಬೇಕು ಎನ್ನುವುದು ನಮ್ಮ ವಾದ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಹೆಚ್.ಅಂಜಿನಪ್ಪ, ನಾಗೇಂದ್ರನಾಯ್ಕ, ಲೋಕೇಶ್‍ನಾಯ್ಕ, ಪ್ರಕಾಶ್‍ನಾಯ್ಕ, ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿದ್ದರು.