ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಜ.14) : ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಾಂಗ್ರೆಸ್ ಐಕ್ಯತಾ ಸಮಾವೇಶ ಚಿತ್ರದುರ್ಗದಲ್ಲಿ ಹೊಸ ಅಧ್ಯಾಯ ಸೃಷ್ಟಿಸಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ಇದೇ ಜನವರಿ 8 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ ಯಶಸ್ವಿಯಾಗಿ ನಡೆದಿದ್ದಕ್ಕೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕೃತಜ್ಞತೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಲ್ಲಿನ 153 ಜಾತಿಗಳು ಒಂದಾಗಿದ್ದೇನ್ನುವ ಸಂದೇಶವನ್ನು ಐಕ್ಯತಾ ಸಮಾವೇಶದ ಮೂಲಕ ರಾಜ್ಯ ಹಾಗೂ ಕೇಂದ್ರಕ್ಕೆ ಮುಟ್ಟಿಸಿದ್ದೇವೆ. ನಮ್ಮ ಜನಾಂಗದವರು ಶಾಸಕ, ಮಂತ್ರಿ, ಸಂಸದ, ಉಪ ಮುಖ್ಯಮಂತ್ರಿಯಾಗಿರಬಹುದು. ಆದರೆ ದಲಿತ ಎನ್ನುವ ಭಾವನೆ ಇನ್ನು ಮೇಲ್ಜಾತಿಯವರ ಮನಸ್ಸಿನಿಂದ ಹೋಗಿಲ್ಲ. ಸಾಮಾಜಿಕವಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಬದಲಾವಣೆಯಾಗಬೇಕಾದರೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಒಂದು ವೇದಿಕೆಗೆ ಬರಬೇಕು. ಆಗ ಮಾತ್ರ ಕೋಮುವಾದಿಯನ್ನು ಅಧಿಕಾರದಿಂದ ಕಿತ್ತೊಗೆದು ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸಲು ಸಾಧ್ಯ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ರಾಜ್ಯದ 224 ಕ್ಷೇತ್ರಗಳ ಪೈಕಿ 173 ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಐಕ್ಯತಾ ಸಮಾವೇಶಕ್ಕೆ ಅನೇಕರು ಕೈಜೋಡಿಸಿದ್ದಾರೆ. ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕಿಗೆ ಸಂದೇಶ ಹೋಗಿದೆ ಎಂದರು.
ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ ಕಾಂಗ್ರೆಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮಾವೇಶ ಯಶಸ್ವಿಯಾಗಿದ್ದು, ಇನ್ನು ಮೂರ್ನಾಲ್ಕು ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಬೇಕು. ಕೇಂದ್ರ ಸರ್ಕಾರ ಐ.ಡಿ. ಇ.ಡಿ. ಸಿ.ಬಿ.ಐ. ಇನ್ನು ಅನೇಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‍ಗೆ ಕಾಟ ಕೊಡುತ್ತಿದೆ. ಪ್ರತಿ ಬೂತ್ ಮಟ್ಟದಲ್ಲಿ ಎಲ್ಲಾ ಜಾತಿಯ ಇಪ್ಪತ್ತು ಮಂದಿ ಇರಬೇಕು. ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಬೇಕು. ಅದಕ್ಕಾಗಿ ಎಸ್ಸಿ.ಎಸ್ಟಿ. ಜೊತೆ ಬೇರೆ ಎಲ್ಲಾ ಜಾತಿಯವರು ಸೇರಿಕೊಳ್ಳಬೇಕು. ಒಂದು ಜಾತಿ ಧರ್ಮದ ವಿರುದ್ದ ಮತ್ತೊಂದು ಜಾತಿಯವರನ್ನು ಎತ್ತಿಕಟ್ಟಿ ಶಾಂತಿಯನ್ನು ಕದಡುವುದೇ ಬಿಜೆಪಿ.ಕೆಲಸ. ಸಂವಿಧಾನವನ್ನು ಉಳಿಸಬೇಕಾಗಿರುವುದರಿಂದ ಪ್ರಜಾಪ್ರಭುತ್ವ, ಜಾತ್ಯಾತೀತ ರಾಜಕಾರಣ ಬಯಸುವ ಎಲ್ಲರೂ ಒಂದಾಗಿ ಸೇರಬೇಕು. ಅಲ್ಪಸಂಖ್ಯಾತರನ್ನು ರಕ್ಷಿಸುವ ಜವಾಬ್ದಾರಿ ನಮ್ಮಗಳ ಮೇಲಿದೆ ಎಂದು ಹೇಳಿದರು.
ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡುತ್ತ ಮುಂದಿನ ವಿಧಾನಸಭೆ ಚುನಾವಣೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಡಗಳ ಜನಾಂಗವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ. ಚಿತ್ರದುರ್ಗದಲ್ಲಿ ನಡೆದ ಐಕ್ಯತಾ ಸಮಾವೇಶ ಯಶಸ್ವಿಯಾಗಿದ್ದು, ಬೇರೆ ಜನಾಂಗವನ್ನು ಪಕ್ಷದ ಕಡೆ ಸೆಳೆಯುವ ಕೆಲಸವಾಗಬೇಕು. ರಾಜ್ಯ ಮತ್ತು ಕೇಂದ್ರದಲ್ಲಿ ಕಂಡರಿಯದ ಭಷ್ಟಾಚಾರ, ಸ್ವಜನಪಕ್ಷಪಾತದಿಂದ ಜನ ಬೇಸತ್ತಿದ್ದಾರೆ. ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ.ಯನ್ನು ಕಿತ್ತೆಸೆದು ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಆರಕ್ಕೆ ಆರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಬಿಜೆಪಿ.ಯಿಂದ ಸಂವಿಧಾನ, ಮೀಸಲಾತಿ, ಒಗ್ಗಟ್ಟಿಗೆ ಧಕ್ಕೆಯಾಗುತ್ತಿದೆ. ಜನವಿರೋಧಿ ಕಾಂಗ್ರೆಸ್ ವಿರುದ್ದ ಎಲ್ಲರೂ ಒಗ್ಗಟ್ಟಾಗೋಣ ಎಂದರು.
ಮಾಜಿ ಸಂಸದ ಕೆ.ಪಿ.ಸಿ.ಸಿ. ವಕ್ತಾರ ವಿ.ಎಸ್.ಉಗ್ರಪ್ಪ ಮಾತನಾಡಿ ಪರಿಶಿಷ್ಠ ಜಾತಿಯಲ್ಲಿ 101 ಜಾತಿ, ಪರಿಶಿಷ್ಟ ಪಂಗಡದಲ್ಲಿನ 52 ಜಾತಿಗಳು ಸೇರಿ ಚಿತ್ರದುರ್ಗದಲ್ಲಿ ಐಕ್ಯತಾ ಸಮಾವೇಶ ನಡೆಸಿದ್ದು, ವಿರೋಧಿಗಳಿಗೆ ನಡುಕ ಹುಟ್ಟಿಸಿದೆ. ದೇಶದಲ್ಲಿ ಈ ಎರಡು ಜನಾಂಗ 35 ಕೋಟಿಯಷ್ಟಿದೆ. ಡಬ್ಬಲ್ ಇಂಜಿನ್ ಸರ್ಕಾರದಲ್ಲಿ ಗ್ಯಾಸ್, ಪೆಟ್ರೋಲ್, ಡೀಸೆಲ್ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವುದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ದೇಶದ ಪ್ರಧಾನಿ ಚುನಾವಣೆ ಪೂರ್ವದಲ್ಲಿ ಜನತೆಗೆ ನೀಡಿದ್ದ ಯಾವ ಭರವಸೆಯನ್ನು ಈಡೇರಿಸಿಲ್ಲ. ಆಧುನಿಕ ಭಸ್ಮಾಸುರನಿದ್ದಂತೆ ಎಂದು ವ್ಯಂಗ್ಯವಾಡಿದರು.
ಸಂವಿಧಾನ, ಸಾಮಾಜಿಕ ನ್ಯಾಯಕ್ಕೆ ಉಳಿಗಾಲವಿಲ್ಲದಂತಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಕಾರ್ಯಕರ್ತರು ಎಚ್ಚೆತ್ತುಕೊಂಡು ಬಿಜೆಪಿ.ಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು. ಮದವೇರಿದ ಬಿಜೆಪಿ.ಯನ್ನು ಮಣಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಂದ ಮಾತ್ರ ಸಾಧ್ಯ. ಪಕ್ಷದ ಹೈಕಮಾಂಡ್ ವಿಧಾನಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೇಟ್ ನೀಡಲಿ ಗೆಲುವಿಗೆ ಶ್ರಮಿಸಬೇಕೆಂದು ವಿನಂತಿಸಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್ ಪರಿಶಿಷ್ಟ ಪಂಗಡಗಳ ವಿಭಾಗದ ರಾಜ್ಯಾಧ್ಯಕ್ಷ ಪಾಲಯ್ಯ ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಗೀತ ನಂದಿನಿಗೌಡ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ವಿಧಾನಪರಿಷತ್ ಮಾಜಿ ಸದಸ್ಯೆ ಜಯಮ್ಮ ಬಾಲರಾಜ್, ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಮುರಳಿಧರ ಹಾಲಪ್ಪ, ಹನುಮಲಿ ಷಣ್ಮುಖಪ್ಪ, ಮಾಜಿ ಸಚಿವ ಕೆ.ಶಿವಮೂರ್ತಿ ನಾಯ್ಕ ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಜೆ.ಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಯೋಗೇಶ್‍ಬಾಬು, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಫಾತ್ಯರಾಜನ್, ತುಮಕೂರು ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೋಕ್ಷರುದ್ರಸ್ವಾಮಿ, ಮುನಿರಾ ಎ.ಮಕಾಂದಾರ್, ಕಾರ್ಯದರ್ಶಿ ರುದ್ರಾಣಿ ಗಂಗಾಧರ್, ಎಸ್ಟಿ.ವಿಭಾಗದ ಜಿಲ್ಲಾಧ್ಯಕ್ಷ ಹೆಚ್.ಅಂಜಿನಪ್ಪ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಸೇವಾದಳದ ಇಂದಿರಾ, ನಾಗರಾಜ್ ಜಾನ್ಹವಿ ಇನ್ನು ಅನೇಕರು ವೇದಿಕೆಯಲ್ಲಿದ್ದರು.
ಕಾಂಗ್ರೆಸ್‍ನಲ್ಲಿ ಮುನಿಸಿಕೊಂಡು ಬಿಜೆಪಿ ಸೇರಿದ್ದ ಎಂ.ಎ.ಸೇತೂರಾಂ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೇ ಸಂದರ್ಭದಲ್ಲಿ ಆರ್.ಶೇಷಣ್ಣಕುಮಾರ್ ಇನ್ನು ಕೆಲವರು ಪಕ್ಷಕ್ಕೆ ಸೇರಿದರು.