ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಜ.16): ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸುವಂತೆ ಎ.ಐ.ಸಿ.ಸಿ.ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಪಾರ್ಲಿಮೆಂಟರಿ ಕ್ಷೇತ್ರ ವ್ಯಾಪ್ತಿಗೆ ಬರುವ ಎಂಟು ಅಸೆಂಬ್ಲಿ ಕ್ಷೇತ್ರದ ವೀಕ್ಷಕರಾಗಿ ನೇಮಕಗೊಂಡಿರುವ ಸಂಜಯ್‍ದತ್ ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜ.31 ರೊಳಗೆ ಬೂತ್, ವಾರ್ಡ್ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಕಮಿಟಿಗಳನ್ನು ರಚಿಸಬೇಕು.
ಕಾರ್ಯಕರ್ತರು ಮೊದಲು ಸಂಘಟನೆಯಾದರೆ ಬೇರೆ ಯಾರಿಂದಲೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ. ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದಾರೆ. ಕಾರ್ಯಕರ್ತರಲ್ಲಿ ಹುರುಪು ತುಂಬುವುದಕ್ಕಾಗಿ ಎ.ಐ.ಸಿ.ಸಿ. ನೇತಾರ ರಾಹುಲ್‍ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ವಿರೋಧಿಗಳಿಗೆ ಭಯ ಹುಟ್ಟಿಸಿದೆ.
ವಿಧಾನಸಭೆ ಚುನಾವಣೆಗೆ ಇನ್ನು ಬಹಳಷ್ಟು ಸಮಯವಿಲ್ಲ. ಹಾಗಾಗಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜನತೆಗೆ ನೀಡಿರುವ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಬೇಕಿದೆ ಎಂದು ಹೇಳಿದರು.
ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಮಾತನಾಡಿ ಬ್ರಿಟೀಷರ ವಿರುದ್ದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ಪಕ್ಷಕ್ಕೆ ತ್ಯಾಗ ಬಲಿದಾನಗಳ ಇತಿಹಾಸವಿದೆ. ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಬ್ಯಾಂಕ್‍ಗಳನ್ನು ರಾಷ್ಟ್ರೀಕರಣಗೊಳಿಸಿದ ಇಂದಿರಾಗಾಂಧಿ ಗರೀಭಿಹಠಾವೋ ಕಾಯಕ್ರಮವನ್ನು ಜಾರಿಗೆ ತಂದರು. ಕೈಗಾರಿಕೆ ಡ್ಯಾಂಗಳಾಗಿದ್ದು, ನೆಹರು ಕಾಲದಲ್ಲಿ, ರಾಜೀವ್‍ಗಾಂಧಿ ದೂರದೃಷ್ಟಿಯಿಟ್ಟುಕೊಂಡು ವಿಜ್ಞಾನ ತಂತ್ರಜ್ಞಾನಕ್ಕೆ ಒತ್ತು ನೀಡಿದ್ದರಿಂದ ಎಲ್ಲರ ಕೈಯಲ್ಲಿ ಈಗ ಮೊಬೈಲ್‍ಗಳು ಹರಿದಾಡುತ್ತಿವೆ. ಬಿಜೆಪಿ.ಯಾರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಹನುಮಲಿ ಷಣ್ಮುಖಪ್ಪ, ಮಾಜಿ ಶಾಸಕ ಎ.ವಿ.ಉಮಾಪತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ, ಜೆ.ಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಸ್.ಜಯಣ್ಣ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಜಿ.ವಿ.ಮಧುಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಾರೆಹಳ್ಳಿ ಉಲ್ಲಾಸ್, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಚೋಟು, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಇನ್ನು ಮೊದಲಾದವರು ವೇದಿಕೆಯಲ್ಲಿದ್ದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ.ಪ್ರಕಾಶ್‍ಮೂರ್ತಿ, ಸೈಯದ್ ಅಲ್ಲಾಭಕ್ಷಿ, ಚಾಂದ್‍ಪೀರ್, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.