ಬೆಂಗಳೂರು: 2023ರ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಜನರನ್ನು ಸೆಳೆಯಲು ರಾಜಕೀಯ ಪಕ್ಷಗಳು ಸಾಕಷ್ಟು ಪ್ರಯತ್ನ ಪಡುತ್ತಿವೆ. ಇಂದು ಕಾಂಗ್ರೆಸ್ ಮಹಿಳೆಯರನ್ನು ಸೆಳೆಯುವುದಕ್ಕೆ ಅರಮನೆ ಪ್ಯಾಲೇಸ್ ಗ್ರೌಂಡ್ ನಲ್ಲಿ ನಾ ನಾಯಕಿ ಎಂಬ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಭಾಗಿಯಾಗಿದ್ದರು.
ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಹಾಕಿಕೊಂಡಿರುವ ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬಂದರೆ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಹಣವನ್ನು ನೀಡುವುದಾಗಿ ತಿಳಿಸಿದೆ. ಗೃಹಲಕ್ಷ್ಮೀ ಯೋಜನೆಯಡಿ, ಹಣವನ್ನು ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಕಾರ್ಯಕ್ರಮದ ವೇದಿಕೆಯಲ್ಲಿಯೇ ಆ ಯೋಜನೆಯ ಚೆಕ್ ಗೆ ಸಹಿ ಕೂಡ ಮಾಡಲಾಗಿದೆ. ಮಾದರಿ ಚೆಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಹಿ ಇದೆ. ಈ ಯೋಜನೆಯನ್ನು ಪ್ರಿಯಾಂಕ ಗಾಂಧಿ ಬಿಡುಗಡೆ ಮಾಡಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ, ಬಿಜೆಪಿ ಮೇಲೆ ಹರಿಹಾಯ್ದಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ 40% ಕಮಿಷನ್ ಪಡೆಯುತ್ತಿದೆ. ಮೂರು ವರ್ಷದಲ್ಲಿ ಒಂದೂವರೆ ಲಕ್ಷ ಕೋಟಿ ಲೂಟಿ ಮಾಡಿದೆ. ಬಿಜೆಪಿ ಬಂಡವಾಳಶಾಹಿಯಾಗಿ ಮಾತ್ರ ಕೆಲಸ ಮಾಡುತ್ತಿದೆ. ಬಿಜೆಪಿ ಕೊಟ್ಟಿರುವ ಯಾವ ಭರವಸೆಯನ್ನು ಈಡೇರಿಸಿದೆ ಎಂದು ಪ್ರಶ್ನಿಸಿದ್ದಾರೆ.