ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮಾ.01) : ಮಾರ್ಚ್ 04 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಆಗಮಿಸಿ, ವಿವಿಧ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಮಾಹಿತಿ ನೀಡಿದರು.
ಫಲಾನುಭವಿಗಳ ಸಮಾವೇಶ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಫಲಾನುಭವಿಗಳ ಸಮಾವೇಶದ ಜೊತೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಕೂಡ ಮುಖ್ಯಮಂತ್ರಿಗಳು ನೆರವೇರಿಸುವುದಾಗಿ ತಿಳಿಸಿದ್ದಾರೆ.
ವಿವಿಧ ಇಲಾಖೆಗಳಡಿ ಸುಮಾರು 2 ಸಾವಿರ ಕೋಟಿ ರೂ. ಗಳ ಅಭಿವೃದ್ಧಿ ಯೋಜನೆಗಳಿಗೆ ಅಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಈ ಕುರಿತಂತೆ ಆಯಾ ಇಲಾಖಾವಾರು ಕಾಮಗಾರಿಗಳು ಹಾಗೂ ಅನುದಾನದ ವಿವರವನ್ನು ಪಡೆದುಕೊಳ್ಳಬೇಕು.
500 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು, 47 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತ ಭವನ, 593 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ, ಲೋಕೋಪಯೋಗಿ ಇಲಾಖೆಯಡಿ ಸುಮಾರು 200 ಕೋಟಿ ರೂ. ಯೋಜನೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಸುಮಾರು 90 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಸತಿ ಯೋಜನೆಗಳಡಿ ಮನೆಗಳು, 40 ಕೋಟಿ ರೂ. ವೆಚ್ಚದಲ್ಲಿ ನಗರೋತ್ಥಾನ ಯೋಜನೆ ಕಾಮಗಾರಿಗಳು, ನಗರದಲ್ಲಿ ವಾಲ್ಮೀಕಿ ಭವನ, ಲಿಡ್ಕರ್ ಭವನಗಳ ಉದ್ಘಾಟನೆ ಸೇರಿದಂತೆ ವಿವಿಧ ಇಲಾಖೆಗಳಡಿ ಹಲವಾರು ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಅದೇ ದಿನದಂದು ಚಾಲನೆ ನೀಡುವರು. ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಎಲ್ಲ ಅಧಿಕಾರಿಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.