ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮಾ.04) :18 ಲಕ್ಷ ಜನಸಂಖ್ಯೆ ಇರುವ ಚಿತ್ರದುರ್ಗ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯದ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 9 ಲಕ್ಷ ಫಲಾನುಭವಿಗಳಾಗಿದ್ದಾರೆ. ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರು ಸೇರಿದಂತೆ ಎಲ್ಲ ವರ್ಗದವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸೌಲಭ್ಯ ನೀಡಿದ್ದಾರೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ನಗರದ ಮುರುಘಾರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಶನಿವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಹಾಗೂ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ರೂ.1,484.69 ಕೋಟಿಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವ ನಾಯಕ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರದ ಪ್ರತಿಯೊಬ್ಬ ಬಡವರಿಗೂ ಅನೇಕ ಸೌಲಭ್ಯಗಳನ್ನು ನೀಡಿದ್ದಾರೆ. ದೇಶದ 83 ಕೋಟಿ ಜನರಿಗೆ ಉಚಿತವಾಗಿ ಕಳೆದ ಮೂರು ವರ್ಷದಿಂದ ಅನ್ನಭಾಗ್ಯ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ ಮತ್ತು ದೇಶದಲ್ಲಿ ಕೋವಿಡ್ ಸಂದರ್ಭದಲ್ಲಿ ಉಚಿತವಾಗಿ ಲಸಿಕೆ ನೀಡುವ ಮೂಲಕ ದೇಶದ ಕೋಟ್ಯಾಂತರ ಜನರ ಆರೋಗ್ಯ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ನಮ್ಮ ದೇಶದ ವಿದ್ಯಾರ್ಥಿಗಳನ್ನು ಸುರಕ್ಷಿತಗಾಗಿ ತಾಯ್ನಡಿಗೆ ಕರೆ ತರುವ ಮೂಲಕ ದೇಶದ ಹಿರಿಮೆ ಹೆಚ್ಚಿಸಿದ್ದಾರೆ ಎಂದರು.