ಸುದ್ದಿಒನ್
ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದಲ್ಲಿ ಬಸ್ಸಿನಲ್ಲಿದ್ದ 25 ಮಂದಿ ಸಜೀವ ದಹನವಾಗಿದ್ದಾರೆ. ಇನ್ನೂ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಬಸ್‌ನಲ್ಲಿ 33 ಮಂದಿ ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಯವತ್ಮಾಲ್‌ನಿಂದ ಪುಣೆಗೆ ತೆರಳುತ್ತಿದ್ದ ಬಸ್ ಬುಲ್ಡಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದೆ. ಬೆಂಕಿಯಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಶುಕ್ರವಾರ ರಾತ್ರಿ ಎರಡು ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಏಕಾಏಕಿ ಟೈರ್ ಸ್ಪೋಟಗೊಂಡ ಪರಿಣಾಮ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಬಸ್ ಚಾಲಕ ಬದುಕುಳಿದಿದ್ದಾನೆ. ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಪೊಲೀಸರು ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಬುಲ್ಧಾನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ಶವಗಳನ್ನೂ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮೃತರು ಮತ್ತು ಗಾಯಗೊಂಡವರ ವಿವರಗಳನ್ನು ಗುರುತಿಸಲಾಗಿದ್ದು, ಅವರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ.
ಬೆಂಕಿಯಿಂದಾಗಿ ಬಸ್ಸು ಹೊತ್ತಿ ಉರಿದಿದೆ.
ಇದರಿಂದ ದಟ್ಟ ಹೊಗೆ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪಿಸಿದೆ. ಇದರಿಂದ ಸ್ಥಳೀಯರು ಏಕಾಏಕಿ ಗಾಬರಿಗೊಂಡಿದ್ದಾರೆ.
ಬುಲ್ಡಾನಾ ಪೊಲೀಸ್ ಡಿಎಸ್ಪಿ ಬಾಬುರಾವ್ ಮಹಾಮುನಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ತಿಳಿಸಿದರು. ಈ ಅಪಘಾತದ ಕುರಿತು ಮತ್ತಷ್ಟು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.