ಬೆಂಗಳೂರು: ಬಿಜೆಪಿ ಸರ್ಕಾರ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಾನೇ NEP ರದ್ದಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜಕೀಯ ಕಾರಣಕ್ಕೆ NEP ರದ್ದು ಮಾಡುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರ ಮಕ್ಕಳ ಭವಿಷ್ಯದ ಜೊತೆಗೆ ಆಟವಾಡುತ್ತಿದೆ. NEP ನೀತಿ ಮಾಡಿರುವುದು ಕಸ್ತೂರಿ ರಂಗನ್. ಎಲ್ಲಾ ರಾಜ್ಯದಲ್ಲೂ ಪ್ರಸ್ತುತ ಚಾಲ್ತಿಯಲ್ಲಿರುವುದು ಇದೇ NEP ನೀತಿ. ಆದ್ರೆ ನಮ್ಮ ರಾಜ್ಯದಲ್ಲಿ ಆ ಶಿಕ್ಷಣ ನೀತಿ ಇಲ್ಲ ಅಂದ್ರೆ ಹೇಗೆ..? ಎಂದು ಪ್ರಶ್ನಿಸಿದ್ದಾರೆ.
ಈಗಿನ ಸನ್ನಿವೇಶಕ್ಕೆ ಎನ್ಇಪಿ ಸೂಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ನೀತಿಯನ್ನು ಮತ್ತೆ ಪರಿಶೀಲಿಸಬೇಕು. ಕಾಮಾಲೆ ಕಣ್ಣಿನಿಂದ ಸಿಎಂ ಎನ್ಇಪಿಯನ್ನು ನೋಡುವುದು ಬೇಡ ಎಂದಿದ್ದಾರೆ.
ಎನ್ಇಪಿ ಶಿಕ್ಷಣ ನೀತಿಗೆ ಉಪನ್ಯಾಸಕರು ಹಾಗೂ ಪೋಷಕರ ವಿರೋಧವಿದೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎನ್ಇಪಿ ನೀತಿಯನ್ನು ರದ್ದು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2020ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಕರ್ನಾಟಕದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತಂದಿದ್ದರು.