ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಾಯಕರು ಈಗಾಗಲೇ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಪಕ್ಷ ಬಿಟ್ಟು ಹೋದವರನ್ನೂ ಮತ್ತೆ ಕರೆತರುವ ಪ್ಲ್ಯಾನ್ ಮಾಡುತ್ತಿದ್ದಾರೆ. ಈಗಾಗಲೇ ಕೆಲವರು ಕಾಂಗ್ರೆಸ್ ಗೆ ಹೋಗುವ ನಿರ್ಧಾರವನ್ನು ಮಾಡಿದ್ದಾರೆ ಎನ್ನಲಾಗಿದೆ. ಇದೀಗ ಮೂಲಗಳ ಮಾಹಿತಿ ಪ್ರಕಾರ ಬಿಜೆಪಿ ನಾಯಕ ವಿ ಸೋಮಣ್ಣ ಅವರನ್ನು ಡಿಕೆ ಬ್ರದರ್ಸ್ ಕಾಂಗ್ರೆಸ್ ಗೆ ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ.
ಮಾಜಿ ಸಚಿವ ವಿ ಸೋಮಣ್ಣ ಅವರ ಜೊತೆಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆಯಂತೆ. ಡಿಸಿಎಂ ಡಿಕೆ ಶಿವಕುಮಾರ್ ಮಾತಿಗೆ ವಿ ಸೋಮಣ್ಣ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಸೋಮಣ್ಣ ಅವರು ಕಾಂಗ್ರೆಸ್ ಗೆ ಬಂದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಟಿಕೆಟ್ ನೀಡಲು ಬಯಸಿದ್ದಾರೆ ಎನ್ನಲಾಗಿದೆ.
ತುಮಕೂರಿನಲ್ಲಿ ಲಿಂಗಾಯತ ಮತಗಳೇ ಹೆಚ್ಚಾಗಿ ಇರುವ ಕಾರಣ ಈ ಪ್ಲ್ಯಾನ್ ಮಾಡಲಾಗಿದೆ ಎನ್ನಲಾಗಿದೆ. ಸೋಮಣ್ಣ ಅವರನ್ನು ಕಣಕ್ಕೆ ಇಳಿಸುವ ಮೂಲಕ ಲಿಂಗಾಯತ ಮತಗಳನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಇನ್ನು ವಿ. ಸೋಮಣ್ಣ ಅವರು ಗೋವಿಂದರಾಜ ನಗರ ಕ್ಷೇತ್ರದಲ್ಲಿ ಹೆಸರುವಾಸಿಯಾದವರು. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿತ್ತು. ಹೀಗಾಗಿ ಸೋಲು ಕಂಡಿದ್ದರು. ಸೋಲಿನ ಬಳಿಕ ಕಾಂಗ್ರೆಸ್ ಬರಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.