ಚಿತ್ರದುರ್ಗ ಜಿಲ್ಲೆಯಲ್ಲಿ ಅನ್ನಭಾಗ್ಯ ಫಲಾನುಭವಿಗಳೆಷ್ಟು ? ಪಾವತಿಯಾದ ಹಣವೆಷ್ಟು ? ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದೇನು ?

2 Min Read

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ ಸೆ. 10 : ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 05 ಕೆ.ಜಿ. ಅಕ್ಕಿಯ ಬದಲು ರೂ.  ಗಳ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಯೋಜನೆಯ ಅನುಷ್ಠಾನವನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾನುವಾರದಂದು ಹೊಸದುರ್ಗ ತಾಲ್ಲೂಕು ಮಾದಿಗ ಸಮಾಜದ ಬಿ.ಜಿ. ಅಭಿಮಾನಿ ಬಳಗದ ವತಿಯಿಂದ ಹೊಸದುರ್ಗದ ಅಶೋಕ ರಂಗಮಂದಿರ ಆವರಣದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನೆ ಹಾಗೂ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ, ಕಾರ್ಯಕ್ರಮಕ್ಕೆ ತೆರಳವುದಕ್ಕೂ ಮುನ್ನ ಹೊಸದುರ್ಗದ ಪ್ರವಾಸಿ ಮಂದಿರದಲ್ಲಿ ಅನ್ನಭಾಗ್ಯ ಯೋಜನೆ ಅನುಷ್ಠಾನದ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 100 ದಿನಗಳ ಒಳಗಾಗಿ ಈಗಾಗಲೆ ನಾಲ್ಕು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳನ್ನು ಜಾರಿಗೊಳಿಸಿ, ನೀಡಿದ ಭರವಸೆಯನ್ನು ಈಡೇರಿಸಿದ್ದೇವೆ. ಅದೇ ರೀತಿ ಯುವಜನತೆಗಾಗಿ ಜಾರಿಗೊಳಿಸಲಾಗುತ್ತಿರುವ “ಯುವನಿಧಿ” ಯೋಜನೆಯನ್ನು ಕೂಡ ಬರುವ ಡಿಸೆಂಬರ್ ತಿಂಗಳಲ್ಲಿ ಜಾರಿಗೊಳಿಸುತ್ತೇವೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 3,37,084 ಫಲಾನುಭವಿಗಳಿಗೆ 05 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸುತ್ತಿರುವುದರ ಜೊತೆಗೆ, ಹೆಚ್ಚುವರಿ 05 ಕೆ.ಜಿ. ಅಕ್ಕಿಯ ಬದಲಿಗೆ ಪ್ರತಿ ಫಲಾನುಭವಿಗೆ ನೀಡಲಾಗುತ್ತಿರುವ ರೂ. 170 ಗಳನ್ನು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ.

ರಾಜ್ಯದಲ್ಲಿ 3.61 ಕೋಟಿ ಫಲಾನುಭವಿಗಳಿಗೆ 598.62 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ಜಮಾ ಮಾಡಲಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ 11.45 ಲಕ್ಷ ಫಲಾನುಭವಿಗಳಿಗೆ 19.47 ಕೋಟಿ ರೂ. ಗಳನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ.  ಜಿಲ್ಲೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಕಲ್ಪಿಸದಂತೆ ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಅಧಿಕಾರಿಳಿಗೆ ಸೂಚನೆ ನೀಡಿದರು.

ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ಮಾಜಿ ಸಂಸದ ಚಂದ್ರಪ್ಪ, ಆಹಾರ ಇಲಾಖೆ ಜಂಟಿನಿರ್ದೇಶಕ ಮಧುಸೂಧನ್, ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು ಇದ್ದರು.

 

Share This Article
Leave a Comment

Leave a Reply

Your email address will not be published. Required fields are marked *