ನವದೆಹಲಿ: ಸದ್ಯ ರಾಜ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗುವ ಕಾಲ ಸನಿಹವಾಗಿದೆ. ಯಾಕಂದರೆ ಕಾವೇರಿ ನೀರು ದಿನೇ ದಿನೇ ಕಡಿಮೆಯಾಗುತ್ತಿದೆ. ಅಂದುಕೊಂಡಂತೆ ಮಳೆಯಾಗಿದ್ದರೆ ನೀರಿನ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಆದರೆ ಮುಂಗಾರು ರಾಜ್ಯದಲ್ಲಿ ಕೈಕೊಟ್ಟಿದೆ. ತಮಿಳುನಾಡಿಗೆ ನೀರು ಹರಿಸಿದರೆ ಭವಿಷ್ಯದಲ್ಲಿ ಸಮಸ್ಯೆ ಎದುರಾಗೋದು ಪಕ್ಕ. ಹೀಗಾಗಿ ಕೇಂದ್ರ ಸಚಿವರಿಗೆ ಮನವಿ ಮಾಡಲೆಂದೆ ರಾಜ್ಯ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.
ಇಂದು ಕಡೆಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ನಾಯಕರು ಸಿಕ್ಕಿದ್ದಾರೆ. ಕಾವೇರಿ ಬಗ್ಗೆ ಚರ್ಚೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ನಾಯಕರನ್ನು ಭೇಟಿಯಾಗಿದ್ದಾರೆ.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿದ್ದು, ಕರ್ನಾಟಕದಲ್ಲಿ ಮಳೆಯೇ ಇಲ್ಲದ ಕಾರಣ, ಕಾವೇರಿ ನೀರು ಬತ್ತಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗುವ ಸಾಧ್ಯತೆ ಇದೆ. ಹೀಗಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿನ ಬರದ ಪರಿಸ್ಥಿತಿಯ ಬಗ್ಗೆಯೂ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ರಾಜ್ಯದ ರೈತರು ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ನೋಡಿಕೊಳ್ಳಲು ಒತ್ತಾಯಿಸಿದ್ದಾರೆ. ಈಗ ಕೇಂದ್ರ ನಾಯಕರು ವಿಚಾರ ಮುಟ್ಟಿಸಿದ್ದು, ಮುಂದಿನ ದಿನಗಳಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ. ಈಗಾಗಲೇ ರೈತರು ಹಲವು ದಿನಗಳಿಂದ ಹೋರಾಟವನ್ನು ಮುಂದುವರೆಸಿದ್ದಾರೆ. ಸ್ಯಾಂಡಲ್ ಸ್ಟಾರ್ ಗಳು ಕೂಡ ಒಬ್ಬೊಬ್ಬರಾಗಿಯೇ ಕಾವೇರಿಯ ಪರ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ದನಿ ಎತ್ತುತ್ತಿದ್ದಾರೆ.