ಚಿತ್ರದುರ್ಗ ಸೆ. 21 : ಮುಖ್ಯಮಂತ್ರಿಗಳ ಆಶಯದಂತೆ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನತಾದರ್ಶನ ಆಯೋಜಿಸುವಂತೆ ಸೂಚನೆ ನೀಡಿದ್ದು, ಅದರಂತೆ, ಮೊದಲ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ಸೆ. 25 ರಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಹಿರಿಯೂರಿನಲ್ಲಿ ಆಯೋಜಿಸಲಾಗುವುದು, ಇದು ಪ್ರಥಮ ಕಾರ್ಯಕ್ರಮವಾಗಿರುವುದರಿಂದ ವಿಜೃಂಭಣೆಯ ಚಾಲನೆ ದೊರಕಿಸಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಸೂಚನೆ ನೀಡಿದರು.
ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು, ಸ್ಥಳೀಯವಾಗಿಯೇ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವಂತೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಒಂದೊಂದು ತಾಲ್ಲೂಕಿನಲ್ಲಿ ಜನತಾದರ್ಶನ ಏರ್ಪಡಿಸುವಂತೆ ಹಾಗೂ ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಕಾರ್ಯಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಅದರನ್ವಯ, ಜಿಲ್ಲೆಯಲ್ಲಿ ಪ್ರಸಕ್ತ ಸರ್ಕಾರದ ಮೊದಲ ಜಿಲ್ಲಾ ಮಟ್ಟದ ಜನತಾದರ್ಶನ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಇದೇ ಸೆ. 25 ರಂದು ಹಿರಿಯೂರಿನಲ್ಲಿ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮವನ್ನು ಹಿರಿಯೂರಿನ ಹುಳಿಯಾರು ರಸ್ತೆಯಲ್ಲಿರುವ ತಹಾ ಪ್ಯಾಲೇಸ್ ನಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದೆ.
ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಜನತಾದರ್ಶನ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯ ಯಾವುದೇ ತಾಲ್ಲೂಕಿನ ಸಾರ್ವಜನಿಕರು ತಮ್ಮ ಅಹವಾಲುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಇಲ್ಲಿ ಸಲ್ಲಿಸಬಹುದಾಗಿದೆ.
ಅಧಿಕಾರಿಗಳು ಸ್ಥಳದಲ್ಲಿ ಅಗತ್ಯ ಕೌಂಟರ್ ಗಳನ್ನು ತೆರೆದು ಸಾರ್ವಜನಿಕರ ಅರ್ಜಿಗಳನ್ನು ಪಡೆದುಕೊಂಡು, ಸ್ವೀಕೃತಿ ಪತ್ರ ನೀಡಲು ಕ್ರಮ ಕೈಗೊಳ್ಳಬೇಕು, ಅಲ್ಲದೆ ಸಾರ್ವಜನಿಕ ಕುಂದುಕೊರತೆ ಸ್ವೀಕೃತಿ ಪೋರ್ಟಲ್‍ನಲ್ಲಿ ದಾಖಲಿಸಿ, ಅರ್ಜಿಗಳ ಸಮರ್ಪಕ ವಿಲೇವಾರಿಗೆ ಕ್ರಮ ವಹಿಸಬೇಕು. ವಿವಿಧ ಮಾಸಾಶನಗಳಿಗೆ ಅರ್ಜಿ ಸಲ್ಲಿಸುವವರಲ್ಲಿ, ಯೋಜನೆ ಮಂಜೂರು ಮಾಡಲು ಅರ್ಹರಿದ್ದಲ್ಲಿ, ಸ್ಥಳದಲ್ಲಿಯೇ ಮಂಜೂರಾತಿ ನೀಡಿ, ಇದೇ ಸಂದರ್ಭದಲ್ಲಿಯೇ ಫಲಾನುಭವಿಗೆ ಮಂಜೂರಾತಿ ಪತ್ರ ವಿತರಣೆ ಮಾಡಲು ಕ್ರಮ ವಹಿಸಬೇಕು.
ಇದು ಪ್ರಸಕ್ತ ಸರ್ಕಾರದಿಂದ ಏರ್ಪಡಿಸಲಾಗುತ್ತಿರುವ ಮೊದಲ ಜನತಾದರ್ಶನ ಕಾರ್ಯಕ್ರಮವಾಗಿದ್ದು, ವಿಜೃಂಭಣೆಯಿಂದ ಕಾರ್ಯಕ್ರಮಕ್ಕೆ ಚಾಲನೆ ದೊರಕುವಂತಾಗಲು, ವಿವಿಧ ಇಲಾಖೆಗಳು ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆದು ನಾನಾ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು. ಆರೋಗ್ಯ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳು ವಸ್ತುಪ್ರದರ್ಶನ ಆಯೋಜಿಸಬೇಕು. ಅಲ್ಲದೆ ವಿವಿಧ ಯೋಜನೆಗಳಡಿ ಸರ್ಕಾರಿ ಸೌಲಭ್ಯಗಳು, ಮಂಜೂರಾತಿ ಪತ್ರಗಳನ್ನು ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ವಿತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯವರು ಅಗತ್ಯ ಮುಂಜಾಗ್ರತೆ ವಹಿಸಬೇಕು, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಬೇಕು, ಈ ಕುರಿತು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಹಿರಿಯೂರು ತಹಸಿಲ್ದಾರ್ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕುಗಳ ತಹಸಿಲ್ದಾರರು ಭಾಗಹಿಸಿದ್ದರು.