ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮುಗಿಯುತ್ತಿದ್ದಂತೆ ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ಬದಲಾವಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಜರ್ ಸರ್ಜರಿ ಮಾಡಲಿದ್ದಾರೆ.
ಹೈಕಮಾಂಡ್ ಸೂಚನೆಯಂತೆ ಬಿಎಸ್ವೈ ಬೆಂಬಲಿಗರಿಗೆ ಕೊಕ್ ನೀಡಿ ಹೊಸಬರಿಗೆ ಮಣೆ ಹಾಕಲಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವಧಿಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ವಿಷಯದಲ್ಲಿ ಹೈಕಮಾಂಡ್ ಈಗ ರಂಗ ಪ್ರವೇಶ ಮಾಡಿದೆ.
ಆಪ್ತರಿಗೆ ಬಿಎಸ್ವೈ ಮಣೆಹಾಕಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಅವರ ಬದಲಾವಣೆಗೆ ಪಕ್ಷ ಸೂಚನೆ ನೀಡಿದೆ. ಅದಕ್ಕಾಗಿ ಸಮಿತಿಯನ್ನು ರಚನೆ ಮಾಡಿದ್ದು, ಸಮಿತಿಯ ಅಭಿಪ್ರಾಯ ಪಡೆದು ವರದಿ ಪರಿಶೀಲಿಸಿ ಬಸವರಾಜ್ ಬೊಮ್ಮಾಯಿ ಸರ್ಕಾರ ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ಬದಲಾವಣೆ ಮಾಡಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ನಿಗಮ-ಮಂಡಳಿಗಳಲ್ಲಿ ಸಂಘ ಪರಿವಾರದ ಹಿನ್ನೆಲೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಸಂಘಟನೆಯಲ್ಲಿ ತೊಡಗಿಕೊಂಡವರಿಗೆ ಮಣೆ ಹಾಕಬೇಕು, ಮುಂಬರಲಿರುವ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ನೇಮಕಾತಿ ಮಾಡಬೇಕು ಎನ್ನುವ ಸಂದೇಶವನ್ನು ಪಕ್ಷದ ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ರವಾನಿಸಿದೆ.
ಹೀಗಾಗಿ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿರುವ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರಿಂದ ರಾಜೀನಾಮೆ ಪಡೆದು ಹೊಸದಾಗಿ ನೇಮಕಾತಿ ಮಾಡಲು ಸಿಎಂ ಮುಂದಾಗಿದ್ದಾರೆ.