ಮೈಸೂರು: ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ ಅವರು ಕೂಡ ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಇದರ ನಡುವೆ ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಸಿಎಂ ಆಕಾಂಕ್ಷಿ ಎಂಬ ಚರ್ಚೆ ಶುರುವಾಗಿದೆ.
ಸಿದ್ದರಾಮಯ್ಯ ಅವರು ಈಗಾಗಲೇ ಇನ್ನೈದು ವರ್ಷ ನಾನೇ ಸಿಎಂ ಎಂಬ ಹೇಳಿಕೆ ನೀಡುವ ಮೂಲಕ ಡಿಕೆಶಿ ಬೆಂಬಲಿಗರ ಕಣ್ಣು ಕೆಂಪಗಾಗಿಸಿದ್ದಾರೆ. ಇದರ ನಡುವೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಯಾರು ಆಗಬೇಕು ಎಂಬುದನ್ನು ತೀರ್ಮಾನ ಮಾಡಿರುವುದು ಹೈಕಮಾಂಡ್. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ನನ್ನನ್ನು ಸೇರಿ ಯಾರೇ ಇರಬಹುದು. ಹೈಕಮಾಂಡ್ ಮಟ್ಟದಲ್ಲಿ ಏನು ಚರ್ಚೆ ನಡೆದಿದೆ ಎಂಬುದು ಅವರಿಗೆ ಮಾತ್ರ ಗೊತ್ತಿದೆ.
ನಾನು ಏನಾದರೂ ಹೇಳುತ್ತೀನಿ ಎಂದರೆ ಅದು ನನ್ನ ಕಲ್ಪನೆಯೇ ವಿನಃ ಹೈಕಮಾಂಡ್ ಸಂದೇಶವಲ್ಲ. ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಕೂಡ ಹೈಕಮಾಂಡ್ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಅಲ್ಲಿ ನಾಲ್ಕೈದು ಜನ ಕೂತು ಅಂದು ಮಾತನಾಡಿದ್ದಾರೆ. ಅಲ್ಲಿ ಹೈಕಮಾಂಡ್ ತೆಗೆದುಕೊಂಡಿರುವ ತೀರ್ಮಾನವೇ ಅಂತಿಮ ಎಂದಿದ್ದಾರೆ. ಈ ಮೂಲಕ ಸಿಎಂ ಆಕಾಂಕ್ಷಿಯಾಗಿ ಪ್ರಿಯಾಂಕ್ ಖರ್ಗೆ ಕೂಡ ಇದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ.